ಜಯಲಲಿತಾ ವಿರುದ್ಧ ಪ್ರತಿಭಟನೆ
ಕೋಲಾರ: ಕರ್ನಾಟಕದ ಮೇಕೆದಾಟು ಯೋಜನೆ ಜಾರಿಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಧೋರಣೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಭೂತ ದಹನ ಮಾಡಿದರು. ನಗರದ ಸರ್ಕಾರಿ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕಾವೇರಿ ಕೊಳ್ಳದ ಯೋಜನೆಗಳಿಗೆ ಅಡ್ಡಿಪಡಿಸುವ ಮೂಲಕ ಉದ್ಧಟತನ ತೋರುತ್ತಿರುವ ಜಯಲಲಿತಾ ಅವರ ಒತ್ತಾಯಕ್ಕೆ ಕೇಂದ್ರ ಸರ್ಕಾರ ಮಣಿಯಬಾರದೆಂದು ಒತ್ತಾಯಿಸಿದ್ದಾರೆ. ರಾಜ್ಯದ ಎಲ್ಲ ಸಂಸದರು. ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರು ಹಾಗೂ ರಾಜ್ಯದ ಎಲ್ಲಾ ಶಾಸಕರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಮುಂದಾಗಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.