ತಾ.ಪಂ ಖಾಲಿ ಸ್ಥಾನಗಳಿಗೆ ಚುನಾವಣೆ
ಕೋಲಾರ: ಜಿಲ್ಲೆಯ ಕೋಲಾರ ಮತ್ತು ಶ್ರೀನಿವಾಸಪುರ ತಾಲೂಕು ಪಂಚಾಯಿತಿಯಲ್ಲಿ ಖಾಲಿ ಇರುವ ಸದಸ್ಯರ ಆಯ್ಕೆಯಾಗಿ ಸೆ.29 ರಂದು ಚುನಾವಣೆ ನಿಗದಿ ಪಡಿಸಿ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಿ.ಕೆ.ರವಿ ಅಧಿಸೂಚನೆ ಪ್ರಕಟಿಸಿದ್ದಾರೆ. ಖಾಲಿ ಇರುವ ಸದಸ್ಯರ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಗೆ ಸೆ.18 ಕಡೆ ದಿನ, ಸೆ.19 ನಾಮಪತ್ರಗಳ ಪರಿಶೀಲನೆ, ಸೆ.21 ರಂದು ನಾಮಪತ್ರ ಹಿಂದಕ್ಕೆ ಪಡೆಯಲು ಕಡೆ ದಿನವಾಗಿದ್ದು ಅಗತ್ಯವಿದ್ದಲ್ಲಿ ಸೆ.29ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಚುನಾವಣೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಟಿಯಲ್ಲಿಂದು ಗ್ರಾಮಸಭೆ
ಕೋಲಾರ: ಬಂಗಾರಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಹರಟಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೆ.12 ರಂದು ಬೆಳಿಗ್ಗೆ 9 ಗಂಟೆಗೆ ಗ್ರಾಮ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.ಗ್ರಾಮ ಪಂಚಾಯತಿ ಅಧ್ಯಕ್ಷೆ ಯಲ್ಲಮ್ಮ ಗೋಪಾಲ್ ಆಧ್ಯಕ್ಷತೆ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಬಂಗಾರಪೇಟೆ ಶಾಸಕ ಕೆ.ಎಂ.ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ ಭಾಗವಹಿಸಿದ್ದಾರೆಂದು ಪಿಡಿಒ ಬಿ.ಜಿ. ನಾರಾಯಣಸ್ವಾಮಿ ತಿಳಿಸಿದ್ದಾರೆ.
ಇಂದು ಕುಂದು ಕೊರತೆಗಳ ಸಭೆ
ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲ್ದೂರು ಹೋಬಳಿ ವ್ಯಾಪ್ತಿಯ ಗ್ರಾಮಗಳ ಜನತೆಯ ಕುಂದು ಕೊರತೆ ಅಲಿಸಿ ಸರ್ಕಾರಿ ಅಧಿಕಾರಿಗಳಿಂದ ಆಗುತ್ತಿರುವ ವಿಳಂಬ ಮತ್ತು ನಿರ್ಲಕ್ಷಕ್ಕೆ ಸಂಬಂಧಿಸಿದಂತೆ ಅಹವಾಲು ಸ್ವೀಕರಿಸಲು ಕರ್ನಾಟಕ ಲೋಕಾಯುಕ್ತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೆ.12 ರಂದು ಗುರುವಾರ ಬೆಳಿಗ್ಗೆ 10.30ಕ್ಕೆ ಸಭೆ ಕರೆದಿದ್ದಾರೆ.
ಇಂದು ಸಭೆ
ಕೋಲಾರ: ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿರುವ ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೆ.12 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತೆ ಹಾಗೂ ಉದ್ಯೋಗ ಮೇಳದ ಯಶಸ್ವಿಗಾಗಿ ವಿವಿಧ ಸಮಿತಿಗಳನ್ನು ರಚಿಸುವ ಕುರಿತು ಸಭೆಯನ್ನು ಆಯೋಜಿಸಲಾಗಿದೆ.