ಉಸ್ತುವಾರಿ ಸಚಿವರ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ
ಕೋಲಾರ: ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಳೆದ ಮೂರು ವಾರಗಳಿಂದ ಕೊಲೆ ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸುತ್ತಿರುವ ಜನವಾದಿ ಮಹಿಳಾ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಮೀಪದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಮಳೆಯಿಂದಾಗಿ ಬಯಲಿನಲ್ಲಿ ಕುಳಿತು ಪ್ರತಿಭಟನೆ ಮಾಡಲಾಗುತ್ತಿಲ್ಲ, ಆರೋಪಿಯ ಬಂಧನದವರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಧರಣಿ ನಡೆಸುವುದಾಗಿ ಪ್ರತಿಭಟನಾಕಾರರು ಪಟ್ಟು ಹಿಡಿದರು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಿಂದ ಹೊರಗಡೆ ಕಳುಹಿಸುವಲ್ಲಿ ಸಫಲರಾದರು. ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರಿಗೆ ಮಳೆಯಿಂದ ಮುಕ್ತಿ ದೊರಕಿಸಲು ಸೂಕ್ತ ವ್ಯವಸ್ಥೆ ಮಾಡಬೇಕು ಇಲ್ಲವೇ ಜಿಲ್ಲಾ ಉಸ್ತುವಾರಿ ಸಚಿವ ಕಚೇರಿಯಲ್ಲಿ ಧರಣಿ ಮುಂದುವರೆಸಲು ಅವಕಾಶ ಕಲ್ಪಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಆರೋಪಿ ಬಂಧನದವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ, ಸೆ.18ರಂದು ಕೋಲಾರ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿರುವ ಪ್ರತಿಭಟನಾಕಾರರು ಜಿಲ್ಲಾಧಿಕಾರಿಯ ಮಾತಿಗೂ ಜಗ್ಗುತ್ತಿಲ್ಲ, ದಿನದಿಂದ ದಿನಕ್ಕೆ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದು, ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ, ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ಜನಪ್ರತಿನಿಧಿಗಳು ಪ್ರತಿಭಟನೆ ನಡೆಸುತ್ತಿರುವವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ನಿವಾರಣೆ ಮಾಡದಿದ್ದರೆ ಆಡಳಿತ ಯಂತ್ರ ಕುಸಿಯುತ್ತದೆ ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.