ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಹಾಲು ಉತ್ಪಾದನೆಯಲ್ಲಿ ಅವಿಭಜಿತ ಕೋಲಾರ ಜಿಲ್ಲೆ ಮುಂಚೂಣಿಯಲ್ಲಿ

Mainashree
Updated On : 13 Sept 2013, 12:02 pm

ಕ.ಪ್ರ.ವಾರ್ತೆ  ಚಿಕ್ಕಬಳ್ಳಾಪುರ  ಸೆ. 12
ಕೋಲಾರ- ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಒಕ್ಕೂಟ ಹಾಲು ಉತ್ಪಾದಕರಿಗೆ ಮಾತ್ರವಲ್ಲದೇ ಎಲ್ಲರಿಗೂ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಇದನ್ನು ಸದುಪಯೋಗಪಡಿಸಿ ಕೊಳ್ಳಬೇಕೆಂದು ಕೆಎಂಎಫ್ ನಿರ್ದೇಶಕ ಕೆ.ವಿ. ನಾಗರಾಜ್ ಸಲಹೆ ನೀಡಿದರು.
ನಗರದ ಎಪಿಎಂಸಿ ಯಾರ್ಡಿನಲ್ಲಿರುವ ಕೋಲಾರ- ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಒಕ್ಕೂಟದ ಕಚೇರಿಯಲ್ಲಿ ಆಯೋಜಿಸಿದ್ದ ಕೆಎಂಎಫ್ ವತಿಯಿಂದ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್ ಹಾಗೂ ಜಾನುವಾರುಗಳನ್ನು ಕಳೆದುಕೊಂಡ ನಿರಾಶ್ರಿತರಿಗೆ ಪರಿಹಾರ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೃಷಿಗೆ ಪೂರಕವಾಗಿ ಕೈಗೊಳ್ಳುತ್ತಿರುವ ಹೈನುಗಾರಿಕೆಯು ಮಳೆಯ ಸಮಸ್ಯೆ ಸೇರಿದಂತೆ ನಾನಾ ರೀತಿ ಸಮಸ್ಯೆಗಳಿಗೆ ತತ್ತರಿಸುತ್ತಿರುವ ಈ ಭಾಗದ ರೈತರಿಗೆ ವರದಾನವಾಗಿದೆ. ಹೈನುಗಾರಿಕೆಯಿಂದ ಲಾಭವನ್ನು ಗಳಿಸುತ್ತಿದ್ದು ರಾಜ್ಯದಲ್ಲಿ ಹಾಲು ಉತ್ಪಾದನೆಯಲ್ಲಿ ಅವಿಭಜಿತ ಕೋಲಾರ ಜಿಲ್ಲೆ ಮುಂಚೂಣಿಯಲ್ಲಿದೆ ಎಂದರು.
ಶಾಸಕ ಡಾ. ಕೆ. ಸುಧಾಕರ್ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನೆರವಿಗೆ ಧಾವಿಸುತ್ತಿದೆ. ಪ್ರಮುಖವಾಗಿ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ರೈತರ ಬದುಕು ಹಸನಾಗಲು ಶ್ರಮಿಸುತ್ತಿದೆ. ಚಿಕ್ಕಬಳ್ಳಾಪುರ ತಾಲೂಕಿನಲ್ಲಿನ ಶ್ರೀನಿವಾಸ ಸಾಗರ ಸೇರಿದಂತೆ 10 ಕೆರೆಗಳನ್ನು ಅಭಿವೃದ್ಧಿಪಡಿಸಲು ವರದಿ ತಯಾರಿಸಲು 10 ಕೋಟಿ ರು. ಕೊಟ್ಟಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ ಮಾತನಾಡಿ, ನಂದಿ ಸಮೀಪ ಮೆಗಾ ಡೈರಿಯನ್ನು ನಿರ್ಮಿಸಿದ್ದು ಆದಷ್ಟು ಬೇಗ ಕಾಮಗಾರಿ ಮುಗಿಯುವಂತಾಗಲು ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿದೆ. ಅಲ್ಲದೇ ರಾಜ್ಯ ಸರ್ಕಾರ ಘೋಷಿಸಿದಂತೆ ಲೀಟರ್ ಹಾಲಿಗೆ ಪ್ರೋತ್ಸಾಹ ಧನ ವಿತರಣೆ ಮಾಡದೇ ಬಾಕಿ ಉಳಿಸಿಕೊಂಡಿದ್ದು ಇದರಿಂದ ಹಾಲು ಉತ್ಪಾದಕರಿಗೆ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ ಎಂದರು.
ಹಾಲು ಉತ್ಪಾದಕರು ಹಾಲನ್ನು ಒಕ್ಕೂಟಕ್ಕೆ ಸರಬರಾಜು ಮಾಡಬೇಕು. ಈ ಮೂಲಕ ಒಕ್ಕೂಟ ಅಭಿವೃದ್ಧಿಯಾಗುವುದರ ಜತೆಗೆ ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಳ್ಳಲು ಸಹಕರಿಸಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಅಜಿತ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement