ಅರ್ಹರಿಗೆ ಸೌಲಭ್ಯ ತಲುಪಿಸಿ: ಸುಬ್ಬಾರೆಡ್ಡಿ
ಗುಡಿಬಂಡೆ: ಸರ್ಕಾರದ ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಕರಪತ್ರ ಮುದ್ರಿಸಿ ಅರಿವು ಮೂಡಿಸಬೇಕೆಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರ ತನ್ನ ಇಲಾಖೆಗಳ ಮೂಲಕ ಜನತೆಯ ಅಭಿವೃದ್ಧಿಗಾಗಿ ಹಲವು ಯೋಜನೆ ಜಾರಿಗೆ ತಂದಿದೆ. ಆದರೆ, ಸಾರ್ವಜನಿಕರಿಗೆ ಈ ಬಗ್ಗೆ ಸಮರ್ಪಕ ಮಾಹಿತಿಯಿಲ್ಲ. ಹೀಗಾಗಿ ನಿಜವಾದ ಫಲಾನುಭವಿಗಳಿಗೆ ಯೋಜನೆಗಳ ಲಾಭಸಿಗುತ್ತಿಲ್ಲ. ಇದನ್ನು ತಪ್ಪಿಸಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದರು.
ನಂತರ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಮೊದಲಿಗೆ ಕೃಷಿ ಇಲಾಖೆ ಅಧಿಕಾರಿ ಮಂಜುನಾಥ್ ವಿವರಣೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದ ಶಾಸಕರು ಕೂಡಲೇ ಪರಿಹಾರ ಕಲ್ಪಿಸುವಂತೆ ಸೂಚಿಸಿದರು. ಹಾಸ್ಟೆಲ್ಗಳ ನಿರ್ವಹಣೆ ಬಗ್ಗೆ ವಿವರಣೆ ಪಡೆದ ಬಳಿಕ ಶಾಲೆಗಳಲ್ಲಿ ನೀಡುವ ಬಿಸಿಯೂಟ ಕಾರ್ಯಕ್ರಮದಲ್ಲಿ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕೆಂದು ಹೇಳಿದರು.
ತಾಪಂ ಅಧ್ಯಕ್ಷರಾದ ಆನಂದಮ್ಮ, ಉಪಾಧ್ಯಕ್ಷ ಆದಿನಾರಾಯಣರೆಡ್ಡಿ, ಇಒ ಇಂದ್ರೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.