ಇಂದು ಜಿಲ್ಲಾಡಳಿತ ಭವನ ಉದ್ಘಾಟನೆ
ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಸೆ.19
ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ. 20ರಂದು ಚಿಕ್ಕಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ತಾಲೂಕಿನ ಅಣಕನೂರು ಬಳಿ ಸುಮಾರು 22 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಜಿಲ್ಲಾಡಳಿತ ಭವನ ಲೋಕಾರ್ಪಣೆ ಮಾಡಲಿದ್ದಾರೆ.
ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ.
ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದ ನಂದಿ ರಂಗಮಂದಿರದಲ್ಲಿ ಬೆಳಗ್ಗೆ 12 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಜಿಲ್ಲಾಡಳಿತ ಭವನ ಮತ್ತು ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ ಹಾಗೂ ಚಿಕ್ಕಬಳ್ಳಾಪುರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಶಂಕುಸ್ಥಾಪನೆ ಹಾಗೂ ಚಿಂತಾಮಣಿ ಮಿನಿ ವಿಧಾನಸೌಧದ 1ನೇ ಮತ್ತು 2ನೇ ಮಹಡಿಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರವಾಸೋದ್ಯಮ ಇಲಾಖೆಯಿಂದ 14 ಫಲಾನುಭವಿಗಳಿಗೆ ಮಿನಿ ಟ್ಯಾಕ್ಸಿ ಮತ್ತು ಗ್ರಾಮ ಲೆಕ್ಕಿಗರಾಗಿ ಆಯ್ಕೆಯಾಗಿರುವ 10 ಮಂದಿಗೆ ಸಾಂಕೇತಿಕವಾಗಿ ನೇಮಕಾತಿ ಪತ್ರ ವಿತರಿಸಲಿದ್ದಾರೆ.
ಅಧ್ಯಕ್ಷತೆಯನ್ನು ಶಾಸಕ ಡಾ.ಕೆ. ಸುಧಾಕರ್ ವಹಿಸಲಿದ್ದಾರೆ. ಕೇಂದ್ರ ಸಚಿವರಾದ ಡಾ. ಎಂ. ವೀರಪ್ಪ ಮೊಯ್ಲಿ, ಕೆ.ಎಚ್. ಮುನಿಯಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಸಚಿವ ಎಚ್.ಕೆ.ಪಾಟೀಲ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕಂದಾಯ ಸಚಿವ ವಿ. ಶ್ರೀನಿವಾಸ್ ಪ್ರಸಾದ್, ವಸತಿ ಸಚಿವ ಎಂ.ಎಚ್. ಅಂಬರೀಷ್, ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಅಭಯ್ಚಂದ್ರ, ವಿಧಾನಸಭೆ ಉಪಾಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್.ಎನ್. ಚಿನ್ನಪ್ಪ, ಶಾಸಕರಾದ ಎಂ.ರಾಜಣ್ಣ, ಎಸ್.ಎನ್.ಸುಬ್ಬಾರೆಡ್ಡಿ, ಎಂ. ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಡಾ.ಎ.ಎಚ್. ಶಿವಯೋಗಿಸ್ವಾವು, ವೈ.ಎ. ನಾರಾಯಣಸ್ವಾಮಿ, ನಸೀರ್ ಅಹಮದ್, ಡಿ.ಎಸ್. ವೀರಯ್ಯ, ಡಾ.ಮುಮ್ತಾಜ್ ಆಲಿಖಾನ್ ಮುಂತಾದವರು ಭಾಗವಹಿಸಲಿದ್ದಾರೆ.
ನಿರ್ವಹಣೆಗೆ ಒತ್ತು: ಸುಮಾರು 22 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಜಿಲ್ಲಾಡಳಿತ ಭವನ ಜನರ ಆಶಯದಂತೆ ಉದ್ಘಾಟನೆಯಾಗುತ್ತಿದ್ದು, ಆದಷ್ಟು ಬೇಗ ಸಂಬಂಧಪಟ್ಟ ಕಚೇರಿಗಳು ಕಟ್ಟಡದಲ್ಲಿ ಕಾರ್ಯ ನಿರ್ವಹಿಸುವಂತಾಗಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಡಾ. ವಿಶಾಲ್ ಆರ್. ತಿಳಿಸಿದರು.
ಪ್ರಥಮ ಬಾರಿಗೆ ಜಿಲ್ಲಾಡಳಿತ ನೂತನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಟ್ಟಡ ನಿರ್ಮಾಣಕ್ಕೆ 22 ಕೋಟಿ ಖರ್ಚಾಗಿದ್ದು, ಇನ್ನೂ 5 ಕೋಟಿ ನಿರ್ವಹಣೆ ಮತ್ತು ಪೀಠೋಪಕರಣಗಳಿಗೆ ಬೇಕಾಗಿದೆ. ಸುಮಾರು 55ಕ್ಕೂ ಹೆಚ್ಚು ಜಿಲ್ಲಾ ಮಟ್ಟದ ಸರ್ಕಾರಿ ಕಚೇರಿಗಳು ಹಂತ- ಹಂತವಾಗಿ ಇಲ್ಲಿ ಕಾರ್ಯ ನಿರ್ವಹಿಸಲಿವೆ. ಇದಕ್ಕೂ ಮುಂಚೆ ನೀರು, ವಿದ್ಯುತ್ ಸೇರಿದಂತೆ ನಿರ್ವಹಣೆ ವ್ಯವಸ್ಥೆಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೀಲಾ ಮಂಜುನಾಥ್, ಅಪರ ಜಿಲ್ಲಾಧಿಕಾರಿ ಸತ್ಯಭಾಮ ಉಪಸ್ಥಿತರಿದ್ದರು.