ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಉತ್ತಮ ಆರೋಗ್ಯ ಸೇವೆ ನೀಡಿ

Srinivasa Murthy VN
Updated On : 19 Sept 2013, 11:01 am

ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ, ಸೆ.19
ತಾಂತ್ರಿಕ ಮತ್ತು ಆರ್ಥಿಕ, ಭೌತಿಕವಾಗಿ ಸಾಕಷ್ಟು ಸಮಸ್ಯೆಗಳಿರುವುದರ ನಡುವೆಯೂ ವೈದ್ಯರು ಜನರಿಗೆ ಉತ್ತಮ ಸೇವೆ ನೀಡುವುದರಲ್ಲಿ ಯಾವುದೇ ಕಾರಣಕ್ಕೂ ಲೋಪಗಳಿಗೆ ಅವಕಾಶ ನೀಡಬಾರದು. ಜನರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಆರೋಗ್ಯ ಇಲಾಖೆಯ ಬಗ್ಗೆ ವಿಶ್ವಾಸ ಮೂಡಿಸಬೇಕೆಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಧಿಕಾರಿಗಳ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಆಸ್ಪತ್ರೆಗೆ ಬರುವ ರೋಗಿಗಳನ್ನು ವಿನಯದಿಂದ ಕಂಡು ಅವರಿಗೆ ಸೂಕ್ತ ಚಿಕಿತ್ಸೆಯನ್ನು ಸಕಾಲದಲ್ಲಿ ನೀಡುವುದು ವೈದ್ಯರ ಆದ್ಯ ಕರ್ತವ್ಯವಾಗಿದೆ. ಅದರಲ್ಲೂ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಲೋಪಗಳುಂಟಾಗದಂತೆ ಕಾರ್ಯ ನಿರ್ವಹಿಸಬೇಕೆಂದ ಅವರು, ಸಾಮಾನ್ಯವಾಗಿ ಬಡ ಹಾಗೂ ಕೆಳಸ್ತರದ ಜನರೇ ಸರ್ಕಾರಿ ಆಸ್ಪತ್ರೆಗೆ ಬರುವುದು. ಇದನ್ನರಿತುಕೊಂಡು ಪ್ರಾಮಾಣಿಕವಾಗಿ ಉತ್ತಮ ಚಿಕಿತ್ಸೆ ನೀಡಲು ವೈದ್ಯರು ಮುಂದಾಗಬೇಕು. ಅದೇ ರೀತಿ ಸಿಬ್ಬಂದಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕೆಂದರು.
ತಾಲೂಕು ಆರೋಗ್ಯಾಧಿಕಾರಿಗಳು ಜವಾಬ್ದಾರಿಯಿಂದ ನುಣುಚಿಕೊಂಡು ಎಲ್ಲದಕ್ಕೂ ಜಿಲ್ಲಾ ಆರೋಗ್ಯಾಧಿಕಾರಿಗಳ ಮೇಲೆ ಹಾಕಿದರೆ ಸಹಿಸಲು ಸಾಧ್ಯವಿಲ್ಲ. ತಮ್ಮ ವ್ಯಾಪ್ತಿಗೆ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಸಮಸ್ಯೆಗಳನ್ನು ಖುದ್ದು ಬಗೆಹರಿಸಬೇಕು. ಇರುವ ಸಂಪನ್ಮೂಲ ಬಳಸಿಕೊಂಡು ಗುಣಮಟ್ಟದ ಆರೋಗ್ಯ ಸೇವೆ ಜನರಿಗೆ ಸಿಗುವಂತೆ ಮಾಡಬೇಕು. ಒಂದು ವೇಳೆ ದೂರುಗಳೇನಾದರೂ ಕೇಳಿ ಬಂದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸರ್ಕಾರಿ ಶಾಲೆ ಹಾಗೂ ಆಸ್ಪತ್ರೆಯನ್ನು ಜನರು ತಾತ್ಸಾರದಿಂದ ನೋಡುತ್ತಿದ್ದು, ಈ ದೃಷ್ಟಿಕೋನ ಬದಲಾಗಬೇಕು. ಜನರಿಗೆ ಆರೋಗ್ಯ ಇಲಾಖೆಯ ಬಗೆಗಿನ ಸವಲತ್ತುಗಳ ತಿಳಿವಳಿಕೆ ನೀಡಬೇಕೆಂದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳಲು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ. ಸಂಪೂರ್ಣ ಉಚಿತವಾಗಿದೆ. ಈಗ ಗರ್ಭಿಣಿಯನ್ನು ಉಚಿತವಾಗಿ ಆಸ್ಪತ್ರೆಗೆ ಕರೆದೊಯ್ಯಲು ವಾಹನ ವ್ಯವಸ್ಥೆ ಹಾಗೂ ಹೆರಿಗೆಯ ನಂತರ ಬಾಣಂತಿಯರನ್ನು ಮನೆಗೆ ಕರೆದೊಯ್ಯಲು ವಾಹನ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಚಿಕ್ಕಬಳ್ಳಾಪುರ ಶಾಸಕ ಡಾ. ಕೆ.ಸುಧಾಕರ್ ಮಾತನಾಡಿ, ಆಸ್ಪತ್ರೆಗಳಲ್ಲಿ ಔಷಧಿಗಳ ಲಭ್ಯತೆಯ ಬಗ್ಗೆ ಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ವೈದ್ಯರು ಸಹ ರೋಗಿಗಳಿಗೆ ಚೀಟಿಗಳನ್ನು ಬರೆದುಕೊಟ್ಟು ಹೊರಗಿರುವ ಔಷಧ ಅಂಗಡಿಗಳಿಗೆ ಕಳುಹಿಸಬಾರದು. ಆಸ್ಪತ್ರೆಗಳಲ್ಲಿ ಶುಚಿತ್ವ ಕಾಪಾಡಬೇಕು. ಜಿಲ್ಲಾಸ್ಪತ್ರೆಯ ಎದುರು ಪಾರ್ಕ್‌ಅನ್ನು ನಿರ್ಮಿಸಬೇಕು, ಮಕ್ಕಳ ಚಿಕಿತ್ಸೆಗಾಗಿ ಪ್ರತ್ಯೇಕ ವಾರ್ಡ್ ನಿರ್ಮಿಸಬೇಕು, ಶೌಚಾಲಯಗಳಲ್ಲಿ ಶುಚಿತ್ವ ಕಾಪಾಡಬೇಕು, ಡೆಂಘೀ ಹಾಗೂ ಇತರೆ ಮಾರಣಾಂತಿಕ ರೋಗಗಳ ಬಗೆಗೆ ಜಾಗೃತಿ ಮೂಡಿಸಬೇಕು. ಜತೆಗೆ ಆರೋಗ್ಯ ಇಲಾಖೆಯಲ್ಲಿ ಖಾಲಿಯಿರುವ ಸಿಬ್ಬಂದಿ ನೇಮಿಸಬೇಕಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ. ಮಂಜುಳ ಮುಂತಾದವರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನಾ ಸಚಿವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರೋಗಿಗಳೊಂದಿಗೆ ಮಾತುಕತೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement