ಆಸ್ಪತ್ರೆಗೆ ಮೂಲ ಸೌಕರ್ಯ ಕಲ್ಪಿಸಲು ಶೀಘ್ರ ಕ್ರಮ
ಕೆಜಿಎಫ್: ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಇತರೆ ಮೂಲ ಸೌಕರ್ಯಗಳಿಲ್ಲದೆ ರೋಗಿಗಳು ಪರದಾಡುವ ಸ್ಥಿತಿ ಉಂಟಾಗಿದ್ದು, ಕ್ಷೇತ್ರದ ವಿವಿಧ ಸಂಘ ಸಂಸ್ಥೆಗಳಿಂದ ಆರೋಗ್ಯ ಸಚಿವರಿಗೆ ದೂರುಗಳು ಬಂದ್ದ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ವೈದ್ಯರ ನೇಮಕ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಶೀಘ್ರದಲ್ಲಿ ಕ್ರಮವನ್ನು ಜರುಗಿಸಲಾಗುವುದು ಮತ್ತು ಕೊಳವೆ ಬಾವಿ ಕೊರೆಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಕೋಲಾರ ಜಿಪಂ ಸಿಇಒ ಜುಲ್ಫಿಕರ್‌ಹುಸೇನ್ ಮತ್ತು ತಂಡ ಗುರುವಾರ ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕುಡಿಯುವ ನೀರು ಸೇರಿದಂತೆ ಇತರೆ ಮೂಲಸೌಲಭ್ಯಗಳ ಕುರಿತು ಆಸ್ಪತ್ರೆಮುಖ್ಯ ವೈದ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಕಳೆದ 2 ವರ್ಷಗಳ ಹಿಂದೆ ಕೊಳವೆ ಬಾವಿ ಕೊರೆಸಲು ಸ್ಥಳ ಪರಿಶೀಲನೆ ನಡೆಸಿದರು. ಅದೇ ರೀತಿ ಮಹಿಳಾ ಮತ್ತು ಮಕ್ಕಳ ಹೆರಿಗೆ ಆಸ್ಪತ್ರೆಗೂ ಭೇಟಿ ನೀಡಿ ಪರಿಶೀಲಿಸಿದ ಸಿಇಒ ಜುಲ್ಫಿಕರ್‌ಹುಸೇನ್ ಅವರು ಅಲ್ಲಿಯೂ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಕೊಳವೆ ಬಾವಿ ಕೊರೆಸಲು ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಸಿಇಒ ಜುಲ್ಫಿಕರ್‌ಹುಸೇನ್, ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಸೇರಿದಂತೆ ಇತರೆ ಮೂಲ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಫಯಾಜ್‌ಖಾನ್, ಇ.ಇ.ದೇವರಾಜ್, ತಾಲೂಕು ಕಾರ್ಯನಿರ್ವಹಣಾಧಿಕಾರಿ ಡಾ. ಜಗದೀಶ್‌ಕುಮಾರ್, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಿವಕುಮಾರ್, ನಗರಸಭಾ ಆಯುಕ್ತ ವಿ. ಬಾಲಚಂದ್ರ, ರಾಘವೇಂದ್ರಶೆಟ್ಟಿ, ರವೀಂದ್ರ, ಜಿಪಂ ಸದಸ್ಯರಾದ ಆ.ಮು. ಲಕ್ಷ್ಮೀನಾರಾಯಣ, ನಾರಾಯಣರೆಡ್ಡಿ,ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಡಿ. ಜಯಪಾಲ್, ಕೆಯುಡಿಎ ಮಾಜಿ ಅಧ್ಯಕ್ಷ ಸಂಪತ್‌ಕುಮಾರ್, ಕೆ.ಸಿ. ಮುರಳೀ, ಜಯಂತಿ ಶ್ರೀನಿವಾಸ್, ರಮೇಶ್‌ಜೈನ್, ಸುರೇಶ್ ಹಾಜರಿದ್ದರು.