ಎಚ್ಡಿಕೆ ಗೆಲವಿಗೆ ಶ್ರಮಿಸಿ ಶಾಸಕ ಜಮೀರ್ ಅಹ್ಮದ್ ಮನವಿ
ಬಾಗೇಪಲ್ಲಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗೆಲವಿಗೆ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ಜೆಡಿಎಸ್ ಮುಖಂಡ ಜಮೀರ್ ಅಹಮ್ಮದ್ ಹೇಳಿದರು.
ಪಟ್ಟಣದ ಹೊರವಲಯದಲ್ಲಿನ ಗಿರಿಜಾ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರ 20 ತಿಂಗಳ ಅಧಿಕಾರದ ಅವಧಿಯಲ್ಲಿ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ, ಸೈಕಲ್ ವಿತರಣೆ, ವೃದ್ಧಾಪ್ಯವೇತನ, ವಿಧವಾ ವೇತನ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಅವರನ್ನು ಗೆಲ್ಲಿಸಿ' ಎಂದರು. ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಸಿ.ಆರ್.ಮನೋಹರ್ ಮಾತನಾಡಿ, 'ಕುಮಾರಸ್ವಾಮಿ ಉತ್ತಮ ವ್ಯಕ್ತಿ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಅವರು ಗೆದ್ದರೆ, ಶಾಶ್ವತ ನೀರಾವರಿ ಯೋಜನೆ ಸೇರಿದಂತೆ ವಿವಿಧ ಜನಪರ ಯೋಜನೆಗಳ ಜಾರಿ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದರಲ್ಲಿ ಎರಡು ಮಾತಿಲ್ಲ' ಎಂದರು. ಸಭೆಯಲ್ಲಿ ಹರಿನಾಥರೆಡ್ಡಿ, ರಾಮಕೃಷ್ಣಾರೆಡ್ಡಿ, ವಿ.ಮಂಜುನಾಥರೆಡ್ಡಿ, ಮಾಧವರೆಡ್ಡಿ ಸೇರಿ ಪ್ರಮುಖರಿದ್ದರು.