ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸೆಕ್ಟರ್ ಅಧಿಕಾರಿಗಳ ನಿರ್ಲಕ್ಷ್ಯ: ಜಿಲ್ಲಾಧಿಕಾರಿ ರವಿ ಆಕ್ರೋಶ

Rashmi Kasaragodu
Updated On : 3 Apr 2014, 1:07 am

ಕನ್ನಡಪ್ರಭ ವಾರ್ತೆ, ಕೋಲಾರ, ಏ.2
ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸೆಕ್ಟರ್ ಅಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡದಿರುವುದು ಅಕ್ಷಮ್ಯ ಅಪರಾಧ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಿ.ಕೆ.ರವಿ ತಿಳಿಸಿದರು.
ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಸಹಾಯಕ ಚುನಾವಣಾಧಿಕಾರಿಗಳು, ತಹಸೀಲ್ದಾರರು, ಕ್ಷಿಪ್ರದಳ ಹಾಗೂ ಸೆಕ್ಟರ್ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಮತಗಟ್ಟೆಗಳಿಗೆ ಭೇಟಿ ನೀಡಿ, ಮತಗಟ್ಟೆಗಳ ಪರಿಶೀಲನೆ ನಡೆಸಬೇಕು. ದಿನಕ್ಕೆ ಕನಿಷ್ಠ ಎರಡು ಬಾರಿಯಾದರೂ ಭೇಟಿ ನೀಡಬೇಕು. ಬಹುತೇಕ ಸೆಕ್ಟರ್ ಅಧಿಕಾರಿಗಳು ಮತಗಟ್ಟೆಗಳಿಗೆ ಈವರೆಗೂ ಭೇಟಿ ನೀಡಿಲ್ಲ. ಇದು ಅಧಿಕಾರಿಗಳ ನಿರ್ಲಕ್ಷ್ಯ ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸೆಕ್ಟರ್ ಅಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡದೆ ಇದ್ದರೆ, ತಕ್ಷಣದಿಂದಲೇ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಲಭ್ಯಗಳ ಬಗ್ಗೆ ಪರಿಶೀಲನೆ ಮಾಡಬೇಕು. ಚುನಾವಣೆ ಕೆಲಸ ನಿರ್ವಹಣೆಯಲ್ಲಿ ಸೆಕ್ಟರ್ ಅಧಿಕಾರಿಗಳು, ಕ್ಷಿಪ್ರ ದಳ ಮತ್ತು ಚೆಕ್‌ಪೋಸ್ಟ್‌ಗಳಿಗೆ ಪೂರ್ಣ ಸಹಕಾರ ನೀಡಬೇಕು. ಚುನಾವಣಾ ಸಿಬ್ಬಂದಿಗೆ ತರಬೇತಿ ನೀಡುವ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿಗಳು ಮತ್ತು ತಹಸೀಲ್ದಾರರಿಗೆ ಪೂರ್ಣ ಸಹಕಾರ ನೀಡಬೇಕೆಂದು ತಿಳಿಸಿದರು. ಕ್ಷಿಪ್ರ ದಳದವರು ಸಹಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದರೆ ಅವರ ಮೇಲೆ ಸಹಾ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಭ್ಯರ್ಥಿಗಳು ಪ್ರಚಾರಕ್ಕಾಗಿ ಅನುಮತಿ ಕೇಳಿದಾಗ ಅವರಿಗೆ ಕೂಡಲೇ ಅನುಮತಿಯನ್ನು ನೀಡಬೇಕು.  ಕೆಲವು ತಾಲೂಕುಗಳಿಂದ ಅನುಮತಿ ನೀಡುವುದರಲ್ಲಿ ನಿಧಾನ ಮಾಡುತ್ತಿದ್ದಾರೆಂಬ ದೂರುಗಳು ಬರುತ್ತಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
 ಸಭೆಯಲ್ಲಿ ಸಾಮಾನ್ಯ ವೀಕ್ಷಕರಾದ ಪಂಜಾಬ್ ರಾಜ್ಯದ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ ಬಿಬೇಕಾನಂದ ಸರ್ಕಾರ್ ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement