ಪ್ರಾದೇಶಿಕ ಪಕ್ಷಗಳನ್ನು ಬೆಂಬಲಿಸಲು ಮನವಿ
ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಪಕ್ಷಪಾತ ಮಾಡದೇ ರಾಜ್ಯಕ್ಕೆ ದೊರೆಯಬೇಕಾದ ಸವಲತ್ತುಗಳನ್ನು ಸಕಾಲದಲ್ಲಿ ಒದಗಿಸುವಂತಾಗಲು ಪ್ರಾದೇಶಿಕ ಪಕ್ಷಗಳು ಪ್ರಾಬಲ್ಯವನ್ನು ಸಾಧಿಸಬೇಕಾಗಿದೆ ಎಂದು ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ರಮೇಶ್ ಬಾಬು ಅಭಿಪ್ರಾಯಪಟ್ಟರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೆರೆ ರಾಜ್ಯ ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಾಬಲ್ಯ ಹೊಂದಿವೆ. ಇದರಿಂದ ತಮಿಳುನಾಡಿಗೆ ಕೇಂದ್ರ ಸರ್ಕಾರದಿಂದ ಯಾವುದೇ ಅನ್ಯಾಯವಾಗುವುದಿಲ್ಲ ಎಂದರು. ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಈ ಭಾಗದ ಜನರ ಧ್ವನಿಯಾಗಲು ಮುಂದಾಗಿದ್ದಾರೆ. ಇವರನ್ನು ಗೆಲ್ಲಿಸುವುದರ ಜೊತೆಗೆ ಜೆಡಿಎಸ್ಗೆ ಹೆಚ್ಚು ಸ್ಥಾನಗಳನ್ನು ಜನರು ತಂದು ಕೊಟ್ಟರೆ ಕೇಂದ್ರ ಸರ್ಕಾರದ ಮೇಲೆ ರಾಜ್ಯದ ಅಭಿವೃದ್ಧಿಗಾಗಿ ಒತ್ತಡ ಹೇರಬಹುದು ಎಂದರು. ಎಂ. ವೀರಪ್ಪ ಮೊಯ್ಲಿ ಕೇಂದ್ರದಲ್ಲಿ ಪ್ರಭಾವಿ ಸಚಿವರಾಗಿ ಕಾರ್ಯ ನಿರ್ವಹಿಸಿದರು. ಆದರೆ, ಅವರು ಒಂದು ಭರವಸೆಯನ್ನು ಈಡೇರಿಸಲಿಲ್ಲ ಎಂದು ಆರೋಪಿಸಿದರು. ಗೋಷ್ಠಿಯಲ್ಲಿ ರಂಗನಾಥ್, ಪಕ್ಷದ ಕಾನೂನು ಘಟಕದ ಜಿಲ್ಲಾಧ್ಯಕ್ಷ ಸುಬ್ರಮಣಿ ಇದ್ದರು.