ಅಕ್ರಮ ಮರಳು ಸಾಗಣೆ: ಅಧಿಕಾರಿಗಳ ಅಮಾನತಿಗೆ ಆಗ್ರಹ
ಚಿಂತಾಮಣಿ: ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆಗೆ ಕುಮ್ಮಕ್ಕು ನೀಡುತ್ತಿರುವ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿದ ನಂತರ ತಾಲೂಕು ಕಚೇರಿ ಮುಂಭಾಗದಲ್ಲಿ ಮಾತನಾಡಿದ ಹಸಿರು ಸೇನೆ ತಾಲೂಕು ಅಧ್ಯಕ್ಷ ಜೆ.ವಿ.ರಘುನಾಥ್ ರೆಡ್ಡಿ, 'ಜಿಲ್ಲೆಯಲ್ಲಿ ಅಂತರ್ಜಲ ಕುಸಿಯುತ್ತಿದೆ. ಅಂತರ್ಜಲ ಹೆಚ್ಚಿಸಲು ಮರಳು ಸಂರಕ್ಷಣೆ ಅಗತ್ಯ. ಈ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಎಲ್ಲ ನಿಯಮಗಳನ್ನು ಗಾಳಿಗೆ ತೂರಿ, ಪ್ರಭಾವಿಗಳ ಕುಮ್ಮಕ್ಕಿನಿಂದ ಅಕ್ರಮ ಮರಳು ಸಾಗಣೆಗೆ ಅಧಿಕಾರಿಗಳು ಕುಮ್ಮಕ್ಕು ನೀಡುತ್ತಿದ್ದಾರೆ. ಕೂಡಲೇ ರೆವಿನ್ಯೂ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳನ್ನು ಅಮಾನತು ಗೊಳಿಸಲು ಜಿಲ್ಲಾಧಿಕಾರಿಗೆ ತಹಸೀಲ್ದಾರ್ ಶಿಫಾರಸು ಮಾಡಬೇಕು' ಎಂದು ಆಗ್ರಹಿಸಿದರು.
ಇದಲ್ಲದೆ, ಬರ ಆವರಿಸಿದ್ದು ಗೋಶಾಲೆ ಆರಂಭ ಹಾಗೂ ಮೇವು, ನೀರು ಪೂರೈಕೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಉಪತಹಸೀಲ್ದಾರ್ ವಿಠಲ್‌ರಾವ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಕೆ.ಎಸ್.ಕೃಷ್ಣ, ನಾರಾಯಣಸ್ವಾಮಿ, ವೆಂಕಟೇಶಪ್ಪ, ಎಸ್.ವಿ.ಗಂಗಪ್ಪ, ಸೀತಾರಾಮರೆಡ್ಡಿ, ಬೈರೆಡ್ಡಿ, ಯಲ್ಲಪ್ಪ, ಕೃಷ್ಣಮೂರ್ತಿ, ನರಸಪ್ಪ, ನಾರಾಯಣಸ್ವಾಮಿ, ತಿಪ್ಪಣ್ಣ, ಶೇಖರ್, ಅಮರ್, ಬಿ. ನಾರಾಯಣಸ್ವಾಮಿ, ರಂಜಿತ್‌ಕುಮಾರ್ ಸೇರಿದಂತೆ ಅನೇಕರು ಹಾಜರಿದ್ದರು.