ಹೆಣ್ಣು ಮಕ್ಕಳು ಸ್ವಾವಲಂಬಿಗಳಾಗಿ
ಚಿಕ್ಕಬಳ್ಳಾಪುರ: ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಸ್ವಾವಲಂಬಿ ಜೀವನ ನಡೆಸುವ ಸಾಮರ್ಥ್ಯ ಬೆಳೆಸಿಕೊಂಡಾಗ ಸುಲಭವಾಗಿ ಶೋಷಣೆಯಿಂದ ಮುಕ್ತರಾಗಲು ಸಾಧ್ಯವಾಗುತ್ತದೆ ಎಂದು ಡೆಪ್ಯೂಟಿ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್(ಭದ್ರತೆ) ಅಧಿಕಾರಿ ಎನ್. ಶಿವಪ್ರಸಾದ್ ಅಭಿಪ್ರಾಯ ಪಟ್ಟರು.
ನಗರದ ಸಿಟಿಜನ್ ಕ್ಲಬ್ನಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಮಂಗಳವಾರ ಆಯೋಜಿಸಿದ್ಧ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವ ಸಲುವಾಗಿ ಪ್ರತಿಯೊಬ್ಬರು ಶಿಕ್ಷಣ ಕಡ್ಡಾಯವಾಗಿ ಪಡೆಯಬೇಕು. ಶಿಕ್ಷಣ ಜೀವನ ದಿಕ್ಕನ್ನೇ ಬದಲಾಯಿಸುವ ಶಕ್ತಿಯನ್ನು ಹೊಂದಿದೆ. ಹಿಂದೆ ಮಹಿಳೆಯರು ನಾಲ್ಕು ಗೋಡೆಗಳಿಗೆ ಮಾತ್ರ ಸೀಮಿತವಾಗಿದ್ದರು. ಆದರೆ, ಈಗ ಕಾಲ ಬದಲಾಗಿದೆ. ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ತಮ್ಮನ್ನು ತೊಡಗಿಸಿಕೊಂಡು ಅಪಾರ ಕೊಡುಗೆ ನೀಡುತ್ತಿದ್ದಾರೆ. ಇಷ್ಟಾದರೂ ಮಹಿಳೆಯರು ಶೋಷಣೆ, ದೌರ್ಜನ್ಯ, ಕಿರುಕುಳದಿಂದ ಸಂಪೂರ್ಣವಾಗಿ ಮುಕ್ತರಾಗಲು ಸಾಧ್ಯವಾಗದಿರುವುದು ದುರದೃಷ್ಟಕರ ಎಂದ ಅವರು, ಅಜ್ಞಾನ, ದೌರ್ಬಲ್ಯದಿಂದ ಮಹಿಳೆಯರು ಹೆಚ್ಚಿಗೆ ಶೋಷಣೆಗೆ ಗುರಿಯಾಗುತ್ತಾರೆ. ಈ ಹಿನ್ನೆಲೆಯಲ್ಲಿ ಚೈತನ್ಯ ತರುವ ಶಿಕ್ಷಣ ಪಡೆದಾಗ ಶೋಷಣೆ ವಿರುದ್ಧ ಹೋರಾಡಲು ಅನುವಾಗುತ್ತದೆ ಎಂದರು.
ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್ ಮಾತನಾಡಿ, ನಮ್ಮ ದೇಶದಲ್ಲಿ ಮೇಲು ಕೀಳಿಲ್ಲ. ಪುರುಷರು ಮತ್ತು ಮಹಿಳೆಯರು ಇಬ್ಬರು ಸಮಾನರು. ಇದನ್ನು ಪ್ರತಿಯೊಬ್ಬರು ಅರಿತು ಜೀವನ ನಡೆಸಿದರೆ ಸಮಾಜವು ಉತ್ತಮ ಮಾರ್ಗದಲ್ಲಿ ಸಾಗುತ್ತದೆ ಎಂದರು.
ಉಪ ವಿಭಾಗಾಧಿಕಾರಿ ಕೆ.ಟಿ. ಶಾಂತಲ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಪ್ರೊ. ನಾರಾಯಣಸ್ವಾಮಿ ಮಾತನಾಡಿದರು. ಕಾಲೇಜಿನ ಕ್ರೀಡಾ ಸಮಿತಿ ಸಂಚಾಲಕ ಪ್ರೊ.ಸಿ.ಎನ್. ಧರ್ಮಶೆಟ್ಟಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ಪ್ರೊ. ಅಬ್ದುಲ್ ಹಮೀದ್, ಪ್ರಾಧ್ಯಾಪಕಿ ಗೀತಾ ಇದ್ದರು.