ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಶಿಷ್ಟಾಚಾರ ಉಲ್ಲಂಘನೆ ಆರೋಪ ಸಚಿವರಿಗೆ ಘೇರಾವ್

Srinivasa Murthy VN
Updated On : 2 Aug 2014, 11:57 am

ಕೆಜಿಎಫ್: ಸ್ಥಳಿಯ ಶಾಸಕಿ ವೈ. ರಾಮಕ್ಕ ಅವರನ್ನು ಆಹ್ವಾನಿಸದೆ ಶಿಷ್ಟಾಚಾರ ಉಲ್ಲಂಘನೆ ಮಾಡಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ಗೆ ಮುತ್ತಿಗೆ ಹಾಕಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆಯಿತು.
ಕ್ಷೇತ್ರ ವ್ಯಾಪ್ತಿಯಲ್ಲಿ ಶನಿವಾರ ಲೋಕೋಪಯೋಗಿ ಇಲಾಖೆ, ಪಂಚಾಯತ್ರಾಜ್ ಇಲಾಖೆ ಹಾಗೂ ಪಿಎಂಜಿಎಸ್ವೈ ಯೋಜನೆಯ ವಿವಿಧ ರಸ್ತೆ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಸಂಸದ ಕೆ.ಎಚ್. ಮುನಿಯಪ್ಪ ಸೇರಿದಂತೆ ಇತರೆ ಅಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸಿದಾಗ ಬಿಜೆಪಿ ಕಾರ್ಯಕರ್ತರು ಕಮ್ಮಸಂದ್ರ ಗ್ರಾಮ ಹಾಗೂ ನಗರದ ಸೂರಜ್ಮುಲ್ ವೃತ್ತದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಸ್ಥಳದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ಹಾಗೂ ಮಾರಾಮಾರಿ ನಡೆದಾಗ ಪೊಲೀಸರು ಮಧ್ಯೆ ಪ್ರವೇಶಿಸಿ ಎರಡು ಗುಂಪುಗಳನ್ನು ಚದುರಿಸಿದರು. ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಸಂಸದ ಕೆ.ಎಚ್. ಮುನಿಯಪ್ಪ 5.8 ಕೋಟಿ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪೊಲೀಸ್ ಬಂದೋಬಸ್ತ್ನಲ್ಲಿ ನೆರವೇರಿಸಿದರು.

ಸರ್ವಾಧಿಕಾರಿ ಧೋರಣೆ: ಶಾಸಕಿ ಆರೋಪ
ಕೆಜಿಎಫ್: ಕ್ಷೇತ್ರದ ಜನತೆ ಮತ ನೀಡಿ ತನ್ನನ್ನು ಶಾಸಕಿಯಾಗಿ ಆಯ್ಕೆ ಮಾಡಿದ್ದು, ಕಾರ್ಯಕ್ರಮಕ್ಕೆ ತಮಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘಿಸಿ ಕೆ.ಎಚ್. ಮುನಿಯಪ್ಪ ಅವರ ಪುತ್ರಿ ರೂಪಾಶಶಿಧರ್ಗೆ ರಾಜಕೀಯವಾಗಿ ಲಾಭವಾಗಲು ಸರ್ವಾಧಿಕಾರಿ ರೀತಿಯಲ್ಲಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ್ದಾರೆ ಎಂದು ಶಾಸಕಿ ವೈ. ರಾಮಕ್ಕ ಆರೋಪಿಸಿದರು. ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಹಿನ್ನೆಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಶಾಸಕಿ ವೈ. ರಾಮಕ್ಕ, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಯಾದ ವಿವಿಧ ಕಾಮಗಾರಿಗಳಿಗೆ ಈಗಾಗಲೇ ಶಂಕುಸ್ಥಾಪನೆ ನೆರವೇರಿಸಿ, ಕಾಮಗಾರಿಗಳು ಪ್ರಗತಿಯಲ್ಲಿದ್ದು, ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸದ ಸಂಸದ ಕೆ.ಎಚ್. ಮುನಿಯಪ್ಪ ಈ ರೀತಿ ಕಾಮಗಾರಿಗಳ ಶಂಕುಸ್ಥಾಪನೆ ನಡೆಸುವುದು ಖಂಡನೀಯ ಎಂದರು.

ಜಿಲ್ಲೆಗೆ ನಾನೇ ಸಿಎಂ: ಸಚಿವ ಖಾದರ್
ಕೆಜಿಎಫ್: ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಗೆ ಹೆಚ್ಚುವರಿ ಮೂರು ವೈದ್ಯರನ್ನು ನೇಮಕ ಮಾಡಿದ್ದು, ಇತರೆ ಮೂಲ ಸೌಲಭ್ಯ ಕಲ್ಪಿಸಲು ಕ್ರಮ ಜರುಗಿಸುವುದಾಗಿ ತಿಳಿಸಿದ ಅವರು ಜಿಲ್ಲೆಯಲ್ಲಿ ಕಾಮಗಾರಿ ಉದ್ಘಾಟಿಸಲು ಎಲ್ಲಾ ರೀತಿಯ ಅಧಿಕಾರ ನನಗಿದೆ ಈ ಜಿಲ್ಲೆಗೆ ನಾನೇ ಸಿಎಂ ಎಂದು ಯು.ಟಿ. ಖಾದರ್ ಹೇಳಿದರು.
ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ಮಾತನಾಡಿ, ಲೋಕೋಪಯೋಗಿ ಸಚಿವರು ತುರ್ತು ಕಾರ್ಯಕ್ರಮದ ಕಾರಣ ಗೈರಾಗಿದ್ದು, ಸ್ಥಳಿಯ ಶಾಸಕರಿಗೆ ಆಹ್ವಾನ ನೀಡಲಾಗಿದೆ ಎಂದು  ಖಾದರ್ ಹೇಳಿದರು.ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇಸಿ ಮಾತನಾಡಿ, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೆ ಅಭಿವೃದ್ಧಿಗೆ ಆದ್ಯತೆ ನೀಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದರು. ಸಂಸದ ಕೆ.ಎಚ್. ಮುನಿಯಪ್ಪ ಮಾತನಾಡಿ, ಬಿಜಿಎಂಎಲ್ ಪುನರಾರಂಭ ವಿಚಾರದಲ್ಲಿ ಯುಪಿಎ ಸರ್ಕಾರದ ತೀರ್ಮಾನಗಳನ್ನು ಕೇಂದ್ರದ ಬಿಜೆಪಿ ಸರ್ಕಾರ ಅನುಷ್ಠಾನಗೊಳಿಸಬೇಕಿದೆ ಎಂದರು.

ಪ್ರತಿಭಟನಾನಿರತರತ್ತ ಕೈ ಬೀಸಿದ ಸಚಿವ ಖಾದರ್
ಕೆಜಿಎಫ್: ವಿವಿಧ ಕಾಮಗಾರಿಗಳ ಉದ್ಘಾಟನೆ ಖಂಡಿಸಿ  ಬಿಜೆಪಿ ಕಾರ್ಯಕರ್ತರು ಸಚಿವ ಮತ್ತು ಸಂಸದರ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಕಾರಿನ ಮೇಲೆ ಹತ್ತಿ ತಾವು ಅಂದುಕೊಂಡ ಕೆಲಸ ನೆರವೇರಿಸಿದ್ದೇವೆ ಎಂಬಂತೆ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರತ್ತ ಕೈ ಬೀಸಿದ ದೃಶ್ಯ ಬಿಜೆಪಿ ಕಾರ್ಯಕರ್ತರನ್ನು ಮತ್ತಷ್ಟು ಕೆರಳಿಸಿತು. ನಗರದ ಸೂರಜ್ಮುಲ್ ವೃತ್ತದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಸಚಿವರಿಗೆ ಮುತ್ತಿಗೆ ಹಾಕಿದ್ದರಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement