ಗಿಡಗಂಟೆಗಳಿಂದ ಹೆದ್ದಾರಿಯಲ್ಲಿ ಅಡಚಣೆ
ಕೋಲಾರ: ತಾಲೂಕಿನ ಅರಾಭಿಕೊತ್ತನೂರು ಸಮೀಪ ನಿರ್ಮಾಣವಾಗಿರುವ ಜಾನುವಾರು ಓಡಾಟದ ಅಂಡರ್ ಪಾಸನ್ನು ಸರ್ವೀಸ್ ರಸ್ತೆಯೊಂದಿಗೆ ಸಂಪರ್ಕ ಕಲ್ಪಿಸಿ ಸರಿಪಡಿಸುವಂತೆ ಡಿವೈಎಸ್ಪಿ ಅಶೋಕ್ ಕುಮಾರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹೆದ್ದಾರಿಯಲ್ಲಿ ಗಿಡಗಂಟೆ ಬೆಳೆದಿರುವ ಬಗ್ಗೆ ಗಮನ ಸೆಳೆದಾಗ, ಒಂದು ವೇಳೆ ಇಲ್ಲಿ ಅಪಘಾತ ಸಂಭವಿಸಿದರೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕೂಡಲೇ ಅಂಡರ್ ಪಾಸ್ ಸರಿಪಡಿಸದಿದ್ದಲ್ಲಿ ನಾವು ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ನಂತರ ಜಿಲ್ಲಾ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ನಿರ್ಧರಿಸಿರುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.