ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕರ್ತವ್ಯ ನಿರತ ಸಿಬ್ಬಂದಿ ಸಾವು: ಪ್ರತಿಭಟನೆ

Vishwanath S
Updated On : 14 Feb 2014, 12:32 pm

ಚಿಕ್ಕಬಳ್ಳಾಪುರ: ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರ ಗಾಯಗೊಂಡ ಗಾಯಾಳುವಿಗೆ ತ್ವರಿತವಾಗಿ ಚಿಕಿತ್ಸೆ ಕೊಡಿಸದೇ ಇಲಾಖೆಯೇ ಸಿಬ್ಬಂದಿ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಿ ಮೃತನ ಕುಟುಂಬಸ್ಥರು ಮತ್ತು ಸಾರ್ವಜನಿಕರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ನಗರದ ಭಗತ್ ಸಿಂಗ್ ಬಡಾವಣೆಯ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲಿ ಮೆಕಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮೃತ ವಸಂತ್ ಕುಮಾರ್ (25) ಕುಟುಂಬಸ್ಥರು ಗುರುವಾರ ಕಚೇರಿ ಆವರಣದಲ್ಲಿ ಧರಣಿ ಕುಳಿತು ಇಲಾಖೆಯ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.
ಘಟನೆಯ ಹಿನ್ನೆಲೆ: ಮೃತ ವಸಂತ್ ಕುಮಾರ್ ಬುಧವಾರ ರಾತ್ರಿ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಕೆಟ್ಟು ನಿಂತಿದ್ದ ಸಾರಿಗೆ ಸಂಸ್ಥೆಯ ಬಸ್ಸಿನ ರಿಪೇರಿ ಮಾಡಲು ತೆರಳಿದ್ದ. ಆತ ಬಸ್ಸಿನಡಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹೈದರಾಬಾದ್ ಕಡೆಗೆ ಹೊರಟಿದ್ದ ಲಾರಿಯೊಂದು ಬಸ್ಸಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ಚಲಿಸಿದಾಗ ವಾಹನದ ಕೆಳಗಿದ್ದ ರಾಡ್ ತಲೆಗೆ ತಗುಲಿ ಆತ ತೀವ್ರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಸ್ಥಳದಲ್ಲಿದ್ದ ಗ್ರಾಮಸ್ಥರು ಆ್ಯಂಬುಲೆನ್ಸ್ ವಾಹನಕ್ಕೆ ಕರೆ ಮಾಡಿ ಸುದ್ದಿ ತಿಳಿಸಿದ್ದಾರೆ. ಆದರೆ, ವಾಹನ ಸರಿಯಾದ ಸಮಯಕ್ಕೆ ಬಂದಿಲ್ಲ ಎನ್ನಲಾಗಿದ್ದು ತಕ್ಷಣ ಖಾಸಗೀ ವಾಹನದಲ್ಲಿ ಗಾಯಾಳುವನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ, ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದ್ದು ಆತ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಇದರಿಂದ ಕೆರಳಿದ ಮೃತನ ಸಂಬಂಧಿಕರು ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ದುರ್ಘಟನೆ ನಡೆದ ಸಂದರ್ಭದಲ್ಲಿ ಸ್ಥಳಕ್ಕೆ ಸರಿಯಾದ ವೇಳೆಗೆ ಆ್ಯಂಬುಲೆನ್ಸ್ ವಾಹನ ಬಂದಿಲ್ಲ. ಇದರಿಂದ ಖಾಸಗೀ ವಾಹನದಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಅಲ್ಲದೇ ಅಪಘಾತ ಸಂಭವಿಸಿದ ಬಗ್ಗೆ, ಆತ ಮೃತಪಟ್ಟಿರುವುದರ ಬಗ್ಗೆ ಇಲಾಖೆ ಅಧಿಕಾರಿಗಳು ತಮ್ಮ ಗಮನಕ್ಕೆ ತಂದಿಲ್ಲ. ಆಸ್ಪತ್ರೆಗೆ ಹಿರಿಯ ಅಧಿಕಾರಿಗಳು ಆಗಮಿಸಿ ಕ್ರಮ ಕೈಗೊಳ್ಳಲಿಲ್ಲ. ಒಂದು ವೇಳೆ ತುರ್ತಾಗಿ ಸ್ಪಂದಿಸಿದ್ದರೆ ಗಾಯಾಳು ಸಾವನ್ನಪ್ಪುತ್ತಿರಲಿಲ್ಲ ಎಂದು ಆರೋಪಿಸಿ ಡಿಪೋವಿನಿಂದ ಬಸ್‌ಗಳನ್ನು ಹೊರಗಡೆಗೆ ಮತ್ತು ಒಳಗಡೆಗೆ ಬಿಡಲಿಲ್ಲ. ಇದರಿಂದ ಸ್ಥಳಕ್ಕೆ ವಿಭಾಗೀಯ ನಿಯಂತ್ರಣ ಕಚೇರಿಯ ಅಧಿಕಾರಿ ಶಿವಪ್ರಕಾಶ್ ಭೇಟಿ ನೀಡಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು. ಘಟನೆ ಬಗ್ಗೆ ಹಿರಿಯ ಅಧಿಕಾರಿಗಳ ಗಮನ ಸೆಳೆದು ಇಲಾಖೆಯಿಂದ ದೊರೆಯುವ ಸವಲತ್ತುಗಳನ್ನು ಮೃತನ ಕುಟುಂಬಕ್ಕೆ ದೊರಕಿಸಿಕೊಡಲು ಪ್ರಯತ್ನ ಮಾಡುವುದಾಗಿ ಭರವಸೆ ನೀಡಿ ಪ್ರತಿಭಟನೆಯನ್ನು ಕೈ ಬಿಡುವಂತೆ ಪ್ರತಿಭಟನಾಕಾರರನ್ನು ಮನವೊಲಿಸುವಲ್ಲಿ ಸಫಲರಾದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement