ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕರ್ತವ್ಯಕ್ಕೆ ಅಡ್ಡಿ: ಡಿಎಸ್ಸೆಸ್ ನಾಯಕನ ಬಂಧನ

Srinivasa Murthy VN
Updated On : 15 Feb 2014, 11:43 am

ಚಿಕ್ಕಬಳ್ಳಾಪುರ: ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ, ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಕೆ.ಸಿ. ರಾಜಾಕಾಂತ್ರನ್ನು ನಗರ ಠಾಣೆ ಪೊಲೀಸರು ಶನಿವಾರ ಬೆಳಿಗ್ಗೆ ಬಂಧಿಸಿದ್ದಾರೆ.
ಈ ನಡುವೆ ಇವರ ಬಂಧನಕ್ಕೆ ದಲಿತ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪ ವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಉಪ ವಿಭಾಗಾಧಿಕಾರಿ ಶಾಂತಲಾ ಮತ್ತು ತಹಸೀಲ್ದಾರ್ ನಟೇಶ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ಮಾಡಿದಲ್ಲದೇ ಕಚೇರಿಯಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಕಡತಗಳನ್ನು ತೆಗೆದುಕೊಂಡು ಹೋದರು ಎಂಬ ಆರೋಪಕ್ಕೆ ರಾಜಾಕಾಂತ್ ಗುರಿಯಾಗಿದ್ದಾರೆ.
ಈ ಬಗ್ಗೆ ಖುದ್ದು ಉಪ ವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಇದರನ್ವಯ ರಾಜಾಕಾಂತ್ರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಆರೋಪಿಯನ್ನು ಫೆ.20 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆ: ತಾಲೂಕಿನ ನುಗ್ಗತಹಳ್ಳಿಯ ಭೂ ವಿವಾದಕ್ಕೆ ಸಂಬಂಧಪಟ್ಟಂತೆ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ನಡುವೆ ಮೇಲಿನ ಆದೇಶದಂತೆ ಉಪ ವಿಭಾಗಾಧಿಕಾರಿಗಳು ಜಮೀನನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳಲು ತಹಸೀಲ್ದಾರ್ ಅವರಿಗೆ ಸೂಚನೆ ನೀಡಿದ್ದರು. ಇದರಿಂದ ಆಕ್ರೋಶಗೊಂಡ ಆರೋಪಿ ಕೆ.ಸಿ. ರಾಜಾಕಾಂತ್ ಕಳೆದ ಗುರುವಾರ ಸಂಜೆ ಉಪ ವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಪ್ರಕರಣದ ಬಗ್ಗೆ ವಿಚಾರಿಸಿದ್ದಾರೆ. ದಲಿತರಿಗೆ ಸೇರಿರುವ ಭೂಮಿಯನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳಲು ಮುಂದಾಗಿರುವುದು ಸರಿಯಲ್ಲ ಎಂದು ವಾದಿಸಿದ್ದು ಈ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂದು ಉಪ ವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರ್ ಆರೋಪಿಸಿದ್ದಾರೆ.
ಬಂಧನಕ್ಕೆ ಆಕ್ರೋಶ: ಕೆ.ಸಿ. ರಾಜಾಕಾಂತ್ರನ್ನು ಪೊಲೀಸರು ಬಂಧಿಸುತ್ತಿದ್ದಂತೆ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದ ಶಿಡ್ಲಘಟ್ಟ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ದಲಿತರಿಗೆ ಸಾಗುವಳಿ ಚೀಟಿ ನೀಡಲು ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳು ಪ್ರಭಾವಿಗಳಿಗೆ ಮಾತ್ರ ತಮಗೆ ಇಷ್ಟ ಬಂದಂತೆ ಕೆಲಸ ಮಾಡಿಕೊಡುತ್ತಿದ್ದಾರೆ. ಇದನ್ನು ಪ್ರಶ್ನಿಸುವ ದಲಿತರ ಮೇಲೆ ಸುಳ್ಳು ಆಪಾದನೆ ಹೊರಿಸುತ್ತಿದ್ದಾರೆ ಎಂದು ಆರೋಪಿಸಿದರು. ಘಟನೆ ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಬಾಲಾಜಿ ಸಿಂಗ್ ಭೇಟಿ ನೀಡಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement