ಭಾರಿ ಅವ್ಯವಹಾರ; ವಿದ್ಯಾರ್ಥಿಗಳಿಗೆ ಅನ್ಯಾಯ
ಚಿಕ್ಕಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅನುದಾನದ ಖರ್ಚಿನ ಬಗ್ಗೆ ಸರಿಯಾದ ಲೆಕ್ಕ ಇಲ್ಲ. ಭಾರಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ವರದಿ ನೀಡಲು ಪ್ರಾಂಶುಪಾಲರಿಗೆ ಸೂಚಿಸಲಾಗಿದೆ ಎಂದು ರಾಜ್ಯ ಉಪ ಲೋಕಾಯುಕ್ತ ಸುಭಾಷ್ ಬಿ ಅಡಿ ತಿಳಿಸಿದರು.
ಕಾಲೇಜಿನ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅದ್ವಾನದ ಕಾಲೇಜಾಗಿದ್ದು ಅವ್ಯವಸ್ಥೆಯಿಂದ ಕೂಡಿದೆ. ಹಿಂದೆ ಪರೀಕ್ಷಾ ಶುಲ್ಕ ಕಟ್ಟಿಸಿಕೊಂಡಿದ್ದರೂ ಅನೇಕ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವನ್ನೇ ನೀಡಿಲ್ಲ. ಅದೇ ರೀತಿ ವಿದ್ಯಾರ್ಥಿಗಳಿಗೆ ಶುಲ್ಕ ಮರು ಪಾವತಿ ಮಾಡದೇ ಹಣವನ್ನು ಅಕ್ರಮವಾಗಿಟ್ಟುಕೊಳ್ಳಲಾಗಿದೆ ಎಂದರು.
ಸರ್ಕಾರಿ ಕಾಲೇಜಿನಲ್ಲಿ ಭ್ರಷ್ಟಾಚಾರ ನಡೆದಿದ್ದು ಸರ್ಕಾರದ ಹಣ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಅನಿರೀಕ್ಷಿತವಾಗಿ ಭೇಟಿ ಪರಿಶೀಲನೆ ನಡೆಸಿದ್ದು ಇಲ್ಲಿ ಲೋಪದೋಷಗಳು ಕಂಡು ಬಂದಿವೆ. ಸರ್ಕಾರ ಸೌಲಭ್ಯವನ್ನು ಒದಗಿಸುತ್ತಿದ್ದರೂ ಸಮರ್ಪಕವಾಗಿ ಬಳಕೆಯಾಗದೇ ಇಲ್ಲಿ ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ. ಅನೇಕ ವಿದ್ಯಾರ್ಥಿಗಳಿಗೆ ಫಲಿತಾಂಶವೇ ಬಂದಿಲ್ಲ. ಒಟ್ಟಾರೆ ಇಲ್ಲಿನ ಲೋಪದೋಷಗಳ ಬಗ್ಗೆ ಉತ್ತರ ಪಡೆದುಕೊಳ್ಳಲಾಗುತ್ತಿದೆ. ವರದಿ ಬಂದ ನಂತರ ಕಾನೂನು ಪ್ರಕಾರ ಸಂಬಂಧಪಟ್ಟವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಸ್ಥಳೀಯ ಲೋಕಾಯುಕ್ತ ಪೊಲೀಸರು ಇದ್ದರು.