ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕಾಂಗ್ರೆಸ್‌ಗೆ ಶಕ್ತಿ ಕೊಡಿ

Mainashree
Updated On : 23 Feb 2014, 11:03 am

ಕೋಲಾರ: ನಮ್ಮದು ನುಡಿದಂತೆ ನಡೆಯುವ ಸರ್ಕಾರ, ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದಲ್ಲಿ ಜನತೆಯ ನಂಬಿಕೆ, ವಿಶ್ವಾಸಕ್ಕೆ ಚ್ಯುತಿ ಬರದ ರೀತಿಯಲ್ಲಿ ಆಡಳಿತ ನಡೆಸುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶ್ರೀನಿವಾಸಪುರದಲ್ಲಿ ಅವರು 560 ಕೋಟಿ ರು.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಕಳೆದ 9 ತಿಂಗಳ ಅವಧಿಯಲ್ಲಿ ರೈತರು, ದಲಿತರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸಾಮಾಜಿಕ ನ್ಯಾಯ ದೊರಕಿಸಿಕೊಡುವುದಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ನಿಂದ ಪ್ರಕಟಿಸಿದ 169 ಭರವಸೆಗಳನ್ನು ಹೊಂದಿದ ಪ್ರಣಾಳಿಕೆಯ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಐದು ವರ್ಷಗಳ ಅವಧಿಯಲ್ಲಿ ಪ್ರಣಾಳಿಕೆಯಲ್ಲಿನ ಭರವಸೆಗಳಲ್ಲಿ ಕನಿಷ್ಠ 100 ಭರವಸೆಗಳನ್ನು ಈಡೇರಿಸಬೇಕೆಂಬುದು ನಮ್ಮ ಸರ್ಕಾರದ ಸಂಕಲ್ಪವಾಗಿದೆ. ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ತಾವು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಅರ್ಧ ಗಂಟೆಯಲ್ಲಿ ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡುವ ಉದ್ದೇಶದಿಂದ ಆರು ಯೋಜನೆಗಳನ್ನು ಘೋಷಣೆ ಮಾಡಿ ಅನುಷ್ಠಾನಕ್ಕೆ ತರಲಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷಕ್ಕೆ ಜನತೆ ಹೆಚ್ಚಿನ ರೀತಿಯಲ್ಲಿ ಶಕ್ತಿ ನೀಡಿದಲ್ಲಿ ಎಲ್ಲ ವರ್ಗದ ಬಡವರಿಗೆ ಅನುಕೂಲವಾಗುತ್ತದೆ, ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಎರಡು ಬಜೆಟ್ ಮಂಡಿಸಲಾಗಿದ್ದು, ಘೋಷಿತ ಬಹುತೇಕ ಕಾರ್ಯಕ್ರಮಗಳು ಬಡವರ ಪರವಾಗಿದೆ, ಈಗಾಗಲೇ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದ್ದು, ಜನತೆ ನನಗೆ ಹೆಚ್ಚಿನ ಶಕ್ತಿ ನೀಡಿದಲ್ಲಿ ನಂಬಿಕೆ ವಿಶ್ವಾಸಕ್ಕೆ ಧಕ್ಕೆ ಬರದ ರೀತಿಯಲ್ಲಿ ಸರ್ಕಾರ ನಡೆಸುವುದಾಗಿ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಪರೋಕ್ಷವಾಗಿ ಚಾಲನೆ ನೀಡಿದರು.
ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಪ್ರತಿ ಲೀಟರ್ ಹಾಲಿಗೆ 20 ಪೈಸೆ ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಿರುವುದರಿಂದ ಬಜೆಟ್‌ನಲ್ಲಿ ಇದಕ್ಕಾಗಿ 40 ಕೋಟಿ ರು. ಮೀಸಲಿಡಲಾಗಿದೆ ಎಂದು ವಿವರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement