ಜಿಪಂ ಅವಿಶ್ವಾಸ ಗೊತ್ತುವಳಿ ಸಲ್ಲ: ಸೊಣ್ಣೇಗೌಡ ಆಗ್ರಹ
ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಪಂ ಅಧ್ಯಕ್ಷರು-ಉಪಾಧ್ಯಕ್ಷರನ್ನು ಅಧಿಕಾರದಿಂದ ಇಳಿಸಲು ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡಿಸಲು ಮುಂದಾಗಿರುವುದು ಖಂಡನೀಯ. ಅವಧಿ ಮುಗಿಯುವ ಮೊದಲೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಬದಲಾವಣೆ ಮಾಡುವುದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಮಸಿ ಬಳಿದಂತೆ ಎಂದು ಜಿಲ್ಲಾ ರೇಷ್ಮೆ ಬೆಳೆಗಾರರ ಹಿತರಕ್ಷಣಾ ವೇದಿಕೆ ಸಂಚಾಲಕ ಯಲುವಹಳ್ಳಿ ಸೊಣ್ಣೇಗೌಡ ಆರೋಪಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೊಸ ಜಿಲ್ಲೆ ಈಗಾಗಲೇ ಹಿಂದುಳಿದಿದ್ದು, ಈ ರೀತಿಯ ಘಟನೆಗಳಿಂದ ಮತ್ತಷ್ಟು ಹಿಂದುಳಿಯುವುದರಲ್ಲಿ ಅನುಮಾನವಿಲ್ಲ. ವೈಯಕ್ತಿಕ ಹಿತಾಸಕ್ತಿಗಳಿಗಾಗಿ ಜಿಪಂ ಅಧ್ಯಕ್ಷರು-ಉಪಾಧ್ಯಕ್ಷರನ್ನು ಬದಲಿಸುವುದು ಸರಿಯಾದ ಕ್ರಮವಲ್ಲ. ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಮಾತನಾಡದ ಸದಸ್ಯರು ಅವಧಿಗಿಂತ ಮೊದಲೇ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಬದಲಾವಣೆ ಮಾಡುವ ಹುನ್ನಾರ ಏಕೆ ನಡೆಸುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ಈ ಸಂಬಂಧ ಜನಸಾಮಾನ್ಯ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಮಧ್ಯೆ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.