ಕಳಪೆ ಆಹಾರ ಸರಬರಾಜು; ತಾಪಂ ಅಧ್ಯಕ್ಷೆ ತರಾಟೆ
ಚಿಂತಾಮಣಿ: ವಿದ್ಯಾರ್ಥಿಗಳಿಗೆ ಅಕ್ಷರ ದಾಸೋಹಕ್ಕೆ ಸರಬರಾಜು ಮಾಡುವ ಪದಾರ್ಥಗಳಲ್ಲಿ ಕಳಪೆ ಗುಣಮಟ್ಟ ಕಂಡು ಬಂದ ಹಿನ್ನೆಲೆಯಲ್ಲಿ ತಾಪಂ ಅಧ್ಯಕ್ಷೆ ಗೌರಮ್ಮನಾಗೇಶ್ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಕೈವಾರ ಗ್ರಾಮದ ಕೆಇಎಸ್ ಶಾಲೆಯಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಹಾಗೂ ಸಿದ್ದಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವೃತ್ತಿ ಕೌಶಲ್ಯ ಅಭಿವೃದ್ಧಿ ಅಡಿಯಲ್ಲಿ ಕೃತಕ ಆಹಾರ ತರಬೇತಿ ಶಿಬಿರದಲ್ಲಿ ಭಾಗವಹಿಸಿ, ನಂತರ ಶಾಲೆಯ ಅಡಿಗೆ ಕೋಣೆಯಲ್ಲಿ ಅಕ್ಷರ ದಾಸೋಹ ಸರಬರಾಜು ಮಾಡುವ ಆಹಾರ ಪದಾರ್ಥಗಳು ಮೇಲ್ನೋಟಕ್ಕೆ ಕಳಪೆಯಿಂದ ಕೂಡಿರುವ ಬಗ್ಗೆ ಅಧ್ಯಕ್ಷೆ ಗೌರಮ್ಮನಾಗೇಶ್, ಸದಸ್ಯ ಸವಿತಾಮಂಜುನಾಥ್, ಗ್ರಾಪಂ ಅಧ್ಯಕ್ಷೆ ಮುಬೀನಾತಾಜ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಮಕೃಷ್ಣಪ್ಪ ಕಾರ್ಯವೈಖರಿ ಬಗ್ಗೆ ಅಸಮದಾನ ವ್ಯಕ್ತಪಡಿಸಿದರು.
ಸರ್ಕಾರ ಬಡಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಉದ್ದೇಶದಿಂದ ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಿದ್ದರೂ ಮುಗ್ಗಲು ವಾಸನೆಯಿಂದ ಕೂಡಿದ ಆಹಾರ ಪದಾರ್ಥಗಳನ್ನು ಒದಗಿಸಿರುವುದನ್ನು ಖಂಡಿಸಿದರು. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಉತ್ತಮ ಗುಣಮಟ್ಟದ ಆಹಾರವನ್ನು ಮಕ್ಕಳಿಗೆ ವಿತರಿಸಬೇಕೆಂದು ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳುವುದಾಗಿ ಸ್ಥಳೀಯ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.