ಗ್ಯಾಸ್ ದರ ಏರಿಕೆ ಖಂಡಿಸಿ ಪ್ರತಿಭಟನೆ
ಕೋಲಾರ: ಕೇಂದ್ರ ಸರ್ಕಾರ ಗ್ಯಾಸ್ ದರ ಹೆಚ್ಚಿಸಿ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದೆ ಎಂದು ಆರೋಪಿಸಿ ಬಿಜೆಪಿಯು ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ರಸ್ತೆ ತಡೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕುಗಿದರು. ಕಾಂಗ್ರೆಸ್ ಪಕ್ಷಕ್ಕೆ ಬಡವರ ಬಗ್ಗೆ ಕಾಳಜಿ ಇಲ್ಲವೆಂಬುದಕ್ಕೆ ಮನ ಬಂದಂತೆ ಗ್ಯಾಸ್, ಪೆಟ್ರೋಲ್ ದರ ಏರಿಕೆ ಮಾಡುತ್ತಿರುವುದೇ ಸಾಕ್ಷಿ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಓಂಶಕ್ತಿ ಚಲಪತಿ ಟೀಕಿಸಿದರು.
ಕೂಡಲೇ ಕೇಂದ್ರ ಸರ್ಕಾರ ಗ್ಯಾಸ್ ದರ ಇಳಿಸಿ ಬಡವರಿಗೆ ಅನುಕೂಲ ಮಾಡದಿದ್ದಲ್ಲಿ ಪಕ್ಷದಿಂದ ನಿರಂತರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಮಾಗೇರಿ ನಾರಾಯಣಸ್ವಾಮಿ, ಸತೀಶ್, ಜಮೀಲ್, ಜಾವೀದ್, ಮಮತ, ರತ್ನಮ್ಮ, ಮಹೇಶ್ ರಾವ್ ಕದಂ ಮತ್ತಿತರರು ಇದ್ದರು.