ಗೋಮಾಳ ಪರಭಾರೆ ಆರೋಪ; ಪ್ರತಿಭಟನೆ
ಚಿಂತಾಮಣಿ: ಗುಟ್ಟೂರು ಗ್ರಾಮದಲ್ಲಿರುವ ಸುಮಾರು 2-3 ಎಕರೆ ಪ್ರದೇಶದ ಗೋಮಾಳವನ್ನು ಭೂಮಿಗೆ ಸಂಬಂಧಿಸಿದಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿರುವ ಘಟನೆ ಕೆಂಚಾರ್ಲಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಸೋಮವಾರ ನಡೆದಿದೆ.
ತಾಲೂಕಿನ ಕೆಂಚಾರ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಟ್ಟೂರು ಗ್ರಾಮದಲ್ಲಿನ ಗೋಮಾಳವನ್ನು ಗ್ರಾಮ ಪಂಚಾಯಿತಿ ಸದಸ್ಯ ಜಯರಾಮು ಹಾಗೂ ಪಿಡಿಒ ಕರಿಯಣ್ಣ ಒಳಒಪ್ಪಂದ ಮಾಡಿಕೊಂಡು ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪರಭಾರೆ ಮಾಡಲು ಹೊರಟಿದ್ದಾರೆ. ಅಲ್ಲದೆ ಗ್ರಾಪಂನ ಅನುದಾನದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಂದು ಆರೋಪಿಸಿ ಪಂಚಾಯಿತಿ ಕಾರ್ಯಾಲಯ ಮುಂಭಾಗದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದರು.
ಪ್ರತಿಭಟನೆ ನಡೆಸುತ್ತಿದ್ದ ಗುಟ್ಟೂರು ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸದ ಪಿಡಿಒ ಕರಿಯಣ್ಣ ಸ್ಪಂದಿಸುತ್ತಿಲ್ಲ. ಹಾಗಾಗಿ ಗ್ರಾಪಂ ಸದಸ್ಯ ಹಾಗೂ ಪಿಡಿಒ ವಿರುದ್ಧ ಗ್ರಾಮಸ್ಥರು ಧಿಕ್ಕಾರಗಳನ್ನು ಕೂಗಿದರು. ಗೋಮಾಳವನ್ನು ಯಾವುದೇ ಕಾರಣಕ್ಕೂ ಪರಭಾರೆ ಮಾಡಬಾರದೆಂದು ಆಗ್ರಹಿಸಿದರು.
ಏಕಾಏಕಿ ಲಾಠಿ ಪ್ರಹಾರ: ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಂಚಾರ್ಲಹಳ್ಳಿ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜಣ್ಣ ರಾಜಕೀಯ ಒತ್ತಡಕ್ಕೆ ಮಣಿದು ಏಕಪಕ್ಷೀಯವಾಗಿ ವರ್ತಿಸಿ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು ಎಂದು ಪ್ರತಿಭಟನಾಕಾರರಾದ ಮಧು, ಶ್ರೀನಿವಾಸ್, ಮಂಜುನಾಥ್, ವೆಂಕಟರವಣಪ್ಪ, ನಾರಾಯಣಸ್ವಾಮಿ ಸೇರಿದಂತೆ ಇನ್ನೂ ನೂರಾರು ಗ್ರಾಮಸ್ಥರು ಪೊಲೀಸರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ವೃತ್ತ ನಿರೀಕ್ಷಕ ವೆಂಕಟೇಶ ಮೂರ್ತಿ, ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಮನವಿ ಮಾಡಿದರು. ನಂತರ ಪ್ರತಿಭಟನಾಕಾರರ ಬೇಡಿಕೆಗಳನ್ನು ಈಡೇರಿಸಲು ಇದೇ 18ರಂದು ಪಂಚಾಯಿತಿ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.