ಬಯಲು ಶೌಚ ಬಿಡಿ, ಸ್ವಚ್ಛತೆ ಕಾಪಾಡಿ
ಚಿಕ್ಕಬಳ್ಳಾಪುರ: ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಬಳಕೆ ಮಾಡಿಕೊಂಡು ಗ್ರಾಮೀಣ ಪ್ರದೇಶಗಳಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ಹಂತ ಹಂತವಾಗಿ ಸರಿಪಡಿಸಲು ಆದ್ಯತೆ ನೀಡಲಾಗಿದೆ ಎಂದು ಶಾಸಕ ಡಾ. ಕೆ. ಸುಧಾಕರ್ ತಿಳಿಸಿದರು.
ತಾಲೂಕಿನ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿದ ಏರ್ಪಡಿಸಿದ್ದ ತಿಪ್ಪೇನಹಳ್ಳಿ ಗ್ರಾಮದಿಂದ ರಂಗಸ್ಥಳದಲ್ಲಿರುವ ಶ್ರೀ ರಂಗನಾಥ ಸ್ವಾಮಿ ದೇವಾಲಯಕ್ಕೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಪಡಿಸುವ 68 ಲಕ್ಷ ರು. ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ವಿಶೇಷ ಕಾರ್ಯಕ್ರಮಗಳು ಮತ್ತು ಯೋಜನೆಗಳ ಮೂಲಕ ವಿಶೇಷವಾಗಿ ಅನುದಾನವನ್ನು ಬಿಡುಗಡೆ ಮಾಡುತ್ತಿದೆ.
ವಸತಿ ಹೀನ ಬಡವರಿಗೆ ಬಸವಾ ಯೋಜನೆಗಳ ಮೂಲಕ ಮನೆಗಳನ್ನು ಕಟ್ಟಿಕೊಡಲಾಗುತ್ತಿದೆ. ಇದರಡಿ ಕ್ಷೇತ್ರದಲ್ಲಿ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ 20 ಮನೆಗಳು ಮಂಜೂರಾಗಿದ್ದು ಒಟ್ಟಾರೆ ತಾ.ಪಂ.ವ್ಯಾಪ್ತಿಯಲ್ಲಿ 560 ಮನೆಗಳಿಗೆ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದರು.
ಕ್ಷೇತ್ರದಲ್ಲಿ 310 ಕಿ.ಮೀ. ಜಿ.ಪಂ. ವ್ಯಾಪ್ತಿಗೆ ಬರುತ್ತದೆ.187 ಕಿ.ಮೀ. ಉದ್ದದ ರಸ್ತೆ ತೀವ್ರವಾಗಿ ಹದಗೆಟ್ಟಿದೆ. 1 ಕಿ.ಮೀ. ರಸ್ತೆ ಅಭಿವೃದ್ಧಿ ಪಡಿಸಲು ಸುಮಾರು 27 ಲಕ್ಷ ರು. ವೆಚ್ಚವಾಗುತ್ತದೆ ಎಂದರು.
ಮಾಜಿ ಶಾಸಕ ಎಸ್.ಎಂ. ಮುನಿಯಪ್ಪ ಮಾತನಾಡಿ, ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಗುಣಮಟ್ಟ ಕಾಪಾಡುವುದು ಅಗತ್ಯ.
ಕಳಪೆ ಕಾಮಗಾರಿಯಿಂದ ಅನುದಾನ ವ್ಯರ್ಥವಾಗುತ್ತದೆ. ಈ ನಿಟ್ಟಿನಲ್ಲಿ ಗುತ್ತಿಗೆದಾರರು ಕಳಪೆ ಕಾಮಗಾರಿಗೆ ಅವಕಾಶ ನೀಡಬಾರದು ಎಂದರು.