ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಐಜಿಪಿ ಹುಸೇನ್
ಕೋಲಾರ: ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುವುದಾಗಿ ಕೇಂದ್ರ ವಲಯದ ನೂತನ ಐಜಿಪಿ ಸಯ್ಯದ್ ಉಲ್ಪತ್ ಹುಸೇನ್ ತಿಳಿಸಿದರು.
ಐಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಭೇಟಿ ನೀಡಿದ ಅವರು ಶನಿವಾರ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು ಈ ಬಗ್ಗೆ ತಾವು ಹೆಚ್ಚಿನ ಆಸಕ್ತಿ ವಹಿಸಿ ಹುದ್ದೆಗಳ ಭರ್ತಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು. ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಸತಿ ಸೌಕರ್ಯವಿಲ್ಲದೆ ಬಾಡಿಗೆ ಮನೆಗಳಲ್ಲಿ ವಾಸ ಮಾಡುತ್ತಿದ್ದಾರೆ. ಸುಮಾರು 240 ಮನೆಗಳನ್ನು ನಿರ್ಮಿಸಲು ಸರ್ಕಾರದಿಂದ ಅನುಮತಿ ಸಿಕ್ಕಿದ್ದು ಶೀಘ್ರವೇ ಕ್ರಿಯಾ ಯೋಜನೆ ಸಿದ್ಧಪಡಿಸಿ ಪೊಲೀಸ್ ಗೃಹ ನಿರ್ಮಾಣ ಮಂಡಳಿಗೆ ಕಳುಹಿಸುವುದಾಗಿ ತಿಳಿಸಿದರು. ಜಿಲ್ಲೆಯ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಪೊಲೀಸ್ ಠಾಣೆಗಳ ಸ್ಥಾಪನೆಗೆ ಬೇಡಿಕೆ ಬಂದಿದೆ. ಸುಗಟೂರು ಮತ್ತು ನರಸಾಪುರದಲ್ಲಿ ಹೊಸ ಠಾಣೆ ತೆರೆಯಲು ಸರ್ಕಾರದಿಂದ ಅನುಮತಿ ಸಿಗುವ ಭರವಸೆ ಇದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ನಿಯಂತ್ರಿಣಕ್ಕೆ ತರಲು ಪೊಲೀಸ್ ಇಲಾಖೆಯಿಂದಲೇ ಸರ್ವೆ ಕಾರ್ಯ ನಡೆಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮುಂದಿನ ಕ್ರಮಕ್ಕಾಗಿ ಪ್ರಸ್ತಾವನೆ ಕಳುಹಿಸುವುದಾಗಿ ಉತ್ತರಿಸಿದರು. ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಲಾಖೆಯ ಪ್ರಗತಿಯ ಜೊತೆಗೆ ಕಾನೂನು ಸುವ್ಯವಸ್ಥೆ ವಿಚಾರವಾಗಿಯೂ ಗಮನ ಹರಿಸುವುದಾಗಿ ಹೇಳಿದರು.