ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಇಂದು ಪರಿಶಿಷ್ಟ ಜಾತಿ, ವರ್ಗದ ಕುಂದುಕೊರತೆ ಸಭೆ

Rashmi Kasaragodu
Updated On : 27 Jan 2014, 1:45 am

ಚಿಕ್ಕಬಳ್ಳಾಪುರ: ನಗರದ ಅಂಬೇಡ್ಕರ್ ಭವನದಲಿ ಜ.27 ರಂದು ಬೆಳಿಗ್ಗೆ 10 ಗಂಟೆಗೆ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಅಶ್ವತ್ಥನಾರಾಯಣ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದವರ ಕುಂದು ಕೊರತೆಗಳ ಸಭೆ ನಡೆಯಲಿದೆ. ಜಿಲ್ಲಾಧಿಕಾರಿ ಡಾ. ವಿಶಾಲ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ, ಜಿಲ್ಲಾ ರಕ್ಷಣಾಧಿಕಾರಿ ದಿವ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಇಲಾಖೆ ವತಿಯಿಂದ ಕೈಗೊಂಡಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಅಭಿವೃದ್ಧಿಯ ಪ್ರಗತಿ ಪರಿಶೀಲನೆ ನಡೆಸಲಿದ್ದು ಅಸ್ಪೃಶ್ಯತೆ, ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ಪರಿಹಾರ ದೊರಕಿಸಿರುವ ಬಗ್ಗೆ ಹಾಗೂ ಜಿಪಂ, ತಾಪಂ, ನಗರಸಭೆ, ಪುರಸಭೆ ಹಾಗೂ ಪಪಂ ವ್ಯಾಪ್ತಿಯಲ್ಲಿ ಶೇ.22.75 ಹಾಗೂ ಶೇ.18ರ ಮೀಸಲಾತಿ ಅನುದಾನದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಕುರಿತ ಚರ್ಚೆ ನಡೆಸಲಿದ್ದು ಆ ನಂತರ ಸ್ಥಳೀಯ ವಿದ್ಯಾರ್ಥಿ ನಿಲಯಗಳಿಗೆ ಆಯೋಗದ ಅಧ್ಯಕ್ಷರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಫೆ.10ಕ್ಕೆ ಆದಿ ಜಾಂಬವ ಜಯಂತ್ಯುತ್ಸವ
ಶ್ರೀನಿವಾಸಪುರ: ಫೆ.10 ರಂದು ಶ್ರೀನಿವಾಸಪುರ ತಾಲೂಕು ಕಚೇರಿ ಆವರಣದಲ್ಲಿ 11 ಗಂಟೆಗೆ ಆದಿ ಜಾಂಭವ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ (ಆದಿಜಾಂಭವ) ಮಾದಿಗ ದಂಡೋರದ ಜಿಲ್ಲಾಧ್ಯಕ್ಷ ಹಾರೋಹಳ್ಳಿ ಎಚ್. ವೆಂಕಟೇಶಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಅದೇ ದಿನ ಕ್ಯಾಲೆಂಡರ್ ಬಿಡುಗಡೆಗೊಳಿಸುವುದಾಗಿ ಹಾಗೂ ರಾಜ್ಯಾಧ್ಯಕ್ಷ ಎಂ. ಶಂಕರಪ್ಪ ರಾಜ್ಯ ಉಪಾಧ್ಯಕ್ಷ ರಾಜಪ್ಪ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯ ಸಂಘಟನಾ ಕಾರ್ಯದರ್ಶಿ ಸಾಹುಕಾರ್ ಶಂಕರಪ್ಪ, ಜಿಲ್ಲಾ ಕಾರ್ಯಾಧ್ಯಕ್ಷ ಹೂಹಳ್ಳಿ ಕೃಷ್ಣಪ್ಪ, ತಾಲೂಕು ಅಧ್ಯಕ್ಷ ಶಂಕರಪ್ಪ, ಉಪಾಧ್ಯಕ್ಷ ಗುರುಮೂರ್ತಿ, ಗೌನಿಪಲ್ಲಿ ಬಾಲಾಜಿ ಇದ್ದರು.
ಪ್ರಾದೇಶಿಕ ಪಕ್ಷಕ್ಕೆ ಉತ್ತಮ ಭವಿಷ್ಯ
ಮುಳಬಾಗಲು: ಮತದಾರರು ರಾಷ್ಟ್ರೀಯ ಪಕ್ಷಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದು, ಪ್ರಾದೇಶಿಕ ಪಕ್ಷಗಳಿಗೆ ಉತ್ತಮ ಭವಿಷ್ಯವಿದೆ ಎಂದು ರಾಜ್ಯ ಜೆಡಿಎಸ್ ಅಧ್ಯಕ್ಷ ಎ. ಕೃಷ್ಣಪ್ಪ ಹೇಳಿದರು. ತಾಲೂಕಿನ ಕುರುಡುಮಲೆ ಗ್ರಾಮದಲ್ಲಿ ಶನಿವಾರ ಪುರಾಣ ಪ್ರಸಿದ್ಧ ವಿನಾಯಕ ದೇವರಿಗೆ ಪೂಜೆ ಸಲ್ಲಿಸಿದ ನಂತರ ಲೋಕಸಭೆ ಚುನಾವಣೆ ಪ್ರಚಾರ ಪ್ರಾರಂಭಿಸಿದರು. ರಾಜ್ಯದಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಮುಂದಿನ ಕೇಂದ್ರ ಸರ್ಕಾರದ ರಚನೆಯಲ್ಲಿ ಜೆಡಿಎಸ್ ಪ್ರಮುಖ ಪಾತ್ರ ವಹಿಸಲಿದೆ. ಅಸಮರ್ಥ ಪ್ರಧಾನಿಯನ್ನು ಹೊಂದಿರುವ ಕಾಂಗ್ರೆಸ್ ಮತ್ತು ಕೋಮುವಾದಿ ಬಿಜೆಪಿ ಪಕ್ಷಗಳನ್ನು ಸೋಲಿಸಲು ಕರೆ ನೀಡಿದರು. ಕೋಲಾರ ಜೆಡಿಎಸ್ ಅಧ್ಯಕ್ಷ ಜಿ.ಕೆ. ವೆಂಕಟಶಿವಾರೆಡ್ಡಿ, ಮಾಜಿ ಶಾಸಕ ಕೆ.ಶ್ರೀನಿವಾಸಗೌಡ, ತಾಲೂಕು ಜೆಡಿಎಸ್ ಅಧ್ಯಕ್ಷ ಅಲಂಗೂರು ಶಿವಣ್ಣ, ಜಿಪಂ ಸದಸ್ಯ ಶ್ರೀನಿವಾಸ್, ಸಿ.ವಿ. ಗೋಪಾಲ್, ಕಾಡೇನಹಳ್ಳಿ ನಾಗರಾಜ್, ರಾಮಾಂಜಿ ಇದ್ದರು.
ವರದಕ್ಷಿಣೆ ಕಿರುಕುಳ; ದೂರು
ಚಿಂತಾಮಣಿ: ವರದಕ್ಷಿಣೆ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಗಂಡನ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಘಟನೆ ನೀಲಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಬಟ್ಲಹಳ್ಳಿ ಠಾಣೆ ವ್ಯಾಪ್ತಿಯ ನೀಲಪ್ಪಲ್ಲಿ ಗ್ರಾಮದ ಗೀತಾ ಎಂಬಾಕೆ ತನ್ನ ಗಂಡ ಶ್ರೀನಿವಾಸ್ ವರದಕ್ಷಿಣೆ ತರುವಂತೆ ಪ್ರತಿದಿನ ಹೊಡೆಯುತ್ತಿರುವುದಾಗಿ, ರಕ್ಷಣೆ ನೀಡುವಂತೆ ದೂರು ನೀಡಿದ್ದಾರೆ. ಬಟ್ಲಹಳ್ಳಿ ಸಬ್ಇನ್ಸ್ಪೆಕ್ಟರ್ ಪ್ರವೀಣ್ಕುಮಾರ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement