ಕೋಲಾರದಲ್ಲಿ ಹುತಾತ್ಮ ದಿನಾಚರಣೆ
ಕೋಲಾರ: ನಗರದ ಗಾಂಧಿವನದಲ್ಲಿ ಬುಧವಾರ ಹುತ್ಮಾತರ ದಿನಾಚರಣೆ ಕಾರ್ಯಕ್ರಮದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹನೀಯರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಡಿ.ಕೆ. ರವಿ ರಾಷ್ಟ್ರೀಯ ಸದ್ಭಾವನಾ ಪ್ರಮಾಣ ವಚನ ಬೋಧಿಸಿ ರಾಷ್ಟ್ರದ ಸ್ವಾತಂತ್ರ್ಯ, ಐಕ್ಯತೆಯನ್ನು ಸಂರಕ್ಷಿಸಲು ಮತ್ತು ಬಲಪಡಿಸಲು ಅರ್ಪಣಾ ಮನೋಭಾವದಿಂದ ಸಾಗುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮತ, ಜಾತಿ ಮತ್ತು ಸಮುದಾಯಕ್ಕೆ ಸಂಬಂಧಿಸಿದ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಲು ಹಿಂಸಾಚಾರದಲ್ಲಿ ತೊಡಗುವುದಿಲ್ಲ ಎಂದು ಪ್ರಮಾಣವಚನ ಸ್ವೀಕರಿಸುವಂತೆ ಕೋರಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಎಸ್ಪಿ ರಾಮ್ನಿವಾಸ್ ಸಫೆಟ್, ನಗರದ ಗಾಂಧಿವನದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸರ್ವ ಧರ್ಮಗಳ ಪಠಣ ಮಾಡಲಾಯಿತು.
ಗಾಂಧಿವನದಲ್ಲಿ ಸೇರಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಶಾಲೆಗಳ ಚಿಣ್ಣರು, ಸೇವಾದಳದ ಪದಾಧಿಕಾರಿಗಳು ಎರಡು ನಿಮಿಷ ಮೌನ ಆಚರಿಸಿ, ಗಾಂಧೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಹುತಾತ್ಮರಿಗೆ ನಮನ ಸಲ್ಲಿಸಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಅಶೋಕ್, ಜಿಲ್ಲಾ ವಾರ್ತಾಧಿಕಾರಿ ಸಿ.ಎಂ. ರಂಗಾರೆಡ್ಡಿ, ಆರ್.ಐ ನಾಗರಾಜ್, ರೋಟರಿ ಸಂಸ್ಥೆ ಅಧ್ಯಕ್ಷ ಗೋಪಾಲರೆಡ್ಡಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ ಚಿಲಕಾಂತಮಠ್, ತಾಲೂಕು ಅಧಿಕಾರಿ ಮಂಜುನಾಥ್, ಸೇವಾದಳದ ಸಂಯೋಜಕ ಮಂಜುನಾಥ್ ಇದ್ದರು.