ಮುಳಬಾಗಲು ತಾಲೂಕು ವೈದ್ಯಾಧಿಕಾರಿ ಅಮಾನತು
ಕೋಲಾರ: ಮುಳಬಾಗಲು ತಾಲೂಕು ವೈದ್ಯಾಧಿಕಾರಿ ಡಾ.ಕೆ.ಎಸ್.ಪ್ರಕಾಶ್ ಅವರನ್ನು ಕರ್ತವ್ಯಲೋಪಕ್ಕೆ ಸಂಬಂಧಿಸಿದಂತೆ ಸೇವೆಯಿಂದ ಅಮಾನತ್ತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ವಿ. ರಾಮಪ್ಪ ಆದೇಶ ಹೊರಡಿಸಿದ್ದಾರೆ.
ಡಾ. ಪ್ರಕಾಶ್ ಅವರು ರಜೆ ಪಡೆಯದೆ ಗೈರು ಹಾಜರಾಗುವುದು, ಅವರ ಅಧೀನದಲ್ಲಿ ಬರುವ ಅಧಿಕಾರಿಗಳು, ನೌಕರರು ಮತ್ತು ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ, ಡೆಂಘೀ, ಮಲೇರಿಯಾ ಪ್ರಕರಣಗಳು ಕಾಣಿಸಿಕೊಂಡಾಗ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿರುವುದು ಸೇರಿದಂತೆ ಇನ್ನಿತರ ಆರೋಪಗಳ ಹಿನ್ನಲೆಯಲ್ಲಿ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಜ.8 ರಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಕಳೆದ 2013ರ ಡಿ.21 ರಂದು ಜಿಪಂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದಾಗಲೂ ಡಾ. ಪ್ರಕಾಶ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕ್ರಮ ಕೈಗೊಂಡು ವರ್ಗಾವಣೆ ಮಾಡುವಂತೆ ಡಿಎಚ್ಒ ಅವರಿಗೆ ಸೂಚಿಸಿದ್ದರು. ಡಾ. ಪ್ರಕಾಶ್ ವಿರುದ್ಧ ಮಾಡಲಾಗಿರುವ ಆರೋಪಗಳು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಇಲಾಖಾ ವಿಚಾರಣೆ ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವ ರೀತಿಯಲ್ಲಿ ಅಮಾನತುಪಡಿಸಲಾಗಿದೆ.