ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮುಂದುವರಿದ ವಕೀಲರ ಪ್ರತಿಭಟನೆ

Rashmi Kasaragodu
Updated On : 2 Jul 2014, 1:20 am


ಚಿಕ್ಕಬಳ್ಳಾಪುರ:  ಚಿಕ್ಕಬಳ್ಳಾಪುರ ನಗರದಲ್ಲಿ ನಡೆಯುತ್ತಿರುವ ಪೊಲೀಸ್  ಮತ್ತು ವಕೀಲರ ನಡುವಿನ ಸಂಘರ್ಷ ಮುಂದುವರೆದಿದ್ದು ವಕೀಲರ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲವನ್ನು ವ್ಯಕ್ತಪಡಿಸಿ ಹೋರಾಟಗಳಲ್ಲಿ ಭಾಗವಹಿಸುತ್ತಿವೆ.
 ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ದಲಿತ ಪರ ಸಂಘಟನೆಗಳು ಮತ್ತು ರೈತ ಸಂಘಟನೆಗಳು ಭಾಗವಹಿಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.
ಎಸ್ಪಿ ಮಧ್ಯೆ ಪ್ರವೇಶಕ್ಕೆ ಆಗ್ರಹ: ಎರಡನೇ ದಿನವೂ ಮುಂದುವರೆದ ಪ್ರತಿಭಟನೆಯಲ್ಲಿ, ಕೂಡಲೇ ಜಿಲ್ಲಾ ರಕ್ಷಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಮಧ್ಯೆ ಪ್ರವೇಶಿಸಿ ವಿವಾದವನ್ನು ಬಗೆಹರಿಸಬೇಕೆಂಬ ಒತ್ತಾಯ ಕೇಳಿ ಬಂತು.
 ರೈತ ಸಂಘದ ಮುಖಂಡ ಲಕ್ಷ್ಮೀನಾರಾಯಣ್  ಮಾತನಾಡಿ, ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ವ್ಯಾಪಕವಾಗಿ ನಡೆಯುತ್ತಿದೆ. ಇದನ್ನು ತಡೆಗಟ್ಟಲು ವಿಫಲವಾಗಿರುವ ಪೊಲೀಸರು ವಕೀಲರ ಮೇಲೆ ದೌರ್ಜನ್ಯ ನಡೆಸುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಮಾನತಿಗೆ ಆಗ್ರಹ: ವಕೀಲ ಶ್ರೀನಿವಾಸ್ ಕಾನೂನು ಉಲ್ಲಂಘನೆ ಮಾಡಿದ್ದಲ್ಲಿ ಪ್ರಕರಣವನ್ನು ದಾಖಲಿಸಬೇಕು. ಅದು ಬಿಟ್ಟು ಠಾಣೆಗೆ ಕರೆದುಕೊಂಡು ಹೋಗಿ ಮನಸೋ ಇಚ್ಛೆ ಥಳಿಸಿರುವುದು ಮಾನವ ಹಕ್ಕುಗಳ ಉಲ್ಲಂಘನೆ. ಪೊಲೀಸರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಕೂಡಲೇ ಮೇಲಧಿಕಾರಿಗಳು ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿದರು.
 ಒಂದು ವೇಳೆ ಹೋರಾಟಕ್ಕೆ ಸ್ಪಂದಿಸದೇ ನಿರ್ಲಕ್ಷ್ಯ ವಹಿಸಿದ್ದಲ್ಲಿ ಜಿಲ್ಲಾದ್ಯಂತ ಬಂದ್  ಆಚರಿಸುತ್ತೇವೆ. ಉಗ್ರ ಹೋರಾಟವನ್ನು ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದರು.
 ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಲಕ್ಷ್ಮೀನಾರಾಯಣಪ್ಪ, ಅಶ್ವತ್ಥಪ್ಪ, ನರಸಿಂಹಮೂರ್ತಿ, ಬಾಬುಸಾಬಿ ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement