ಕಾನೂನು ಸುವ್ಯವಸ್ಥೆ ವೈಫಲ್ಯ
ಕೋಲಾರ: ಕಾನೂನು ಸುವ್ಯವಸ್ಥೆಯಲ್ಲಿನ ವೈಫಲ್ಯಗಳಿಗೆ ಸಂಬಂಧಿಸಿದಂತೆ ಶೀಘ್ರವೇ ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿಗಳಿಗೆ ಸಮಗ್ರವಾದ ವರದಿ ಸಲ್ಲಿಸಿ ಜಿಲ್ಲೆಯ ಜನತೆ ಶಾಂತಿ-ನೆಮ್ಮದಿಯಿಂದ ಬದುಕುವುದಕ್ಕೆ ಬೇಕಾದ ಪೂರಕ ವಾತಾವಣ ನಿರ್ಮಾಣ ಮಾಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ತಿಳಿಸಿದರು.
ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಎರಡು ಪ್ರತ್ಯೇಕ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ನಡೆದಿರುವುದು, ಇದಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರು ಮತ್ತು ವಿವಿಧ ಸಂಘಟನೆಗಳಿಂದ ವ್ಯಕ್ತವಾದ ಪ್ರತಿಭಟನೆ ಹಾಗೂ ಮರಳು ದಂಧೆ ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಪೊಲೀಸ್ ಅಧಿಕಾರಿಗಳೊಟ್ಟಿಗೆ ಚರ್ಚಿಸಿದ್ದೇನೆ.
ಸಮಾಜ ಘಾತುಕರಿಗೆ ಪೊಲೀಸ್ ಇಲಾಖೆಯ ಮೇಲೆ ಭಯ ಇಲ್ಲದಿದ್ದಾಗ ಈ ರೀತಿಯ ಘಟನೆಗಳು ನಡೆಯುತ್ತವೆ. ಯಾವುದೇ ಅಹಿತಕರ ಘಟನೆಗಳು ನಡೆದಾಗ ಪೊಲೀಸರು ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಜನತೆ ಬಯಸುವುದು ಸಹಜ. ಒಂದು ವೇಳೆ ಕೆಳ ಹಂತದ ಅಧಿಕಾರಿಗಳಿಂದ ಲೋಪಗಳು ಆಗಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾದ ಹೊಣೆಗಾರಿಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳದ್ದಾಗಿರುತ್ತದೆ ಎಂದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ತಿ ಮತ್ತು ಬೇತಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳುವುದಕ್ಕೆ ಆಗಿರುವ ವಿಳಂಬ ಮತ್ತು ನಿರ್ಲಕ್ಷ್ಯದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.
ಎರಡೂ ಘಟನೆಗಳಿಗೆ ಸಂಬಂಧಿಸಿದಂತೆ ಪೊಲೀಸರಿಂದ ಆಗಿರುವ ವೈಫಲ್ಯದ ಬಗ್ಗೆ ಮೇಲಧಿಕಾರಿಗಳು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು, ಸಮಾಜ ಘಾತಕರು ಯಾರೇ ಆಗಿರಲಿ, ಎಷ್ಟೇ ಪ್ರಭಾವಿಗಳು ಇರಲಿ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಒಂದು ವೇಳೆ ತಮ್ಮ ಆದೇಶ ಪಾಲಿಸದಿದ್ದರೆ ಮೇಲಧಿಕಾರಿಗಳನ್ನೇ ಹೊಣೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಡಿಸಿ, ಎಸ್ಪಿ ದೋಸ್ತಿ: ಜಿಲ್ಲಾಧಿಕಾರಿ ಮತ್ತು ಎಸ್ಪಿ ನಡುವೆ ಸಾಮರಸ್ಯದ ಕೊರತೆ ಇದೆ ಎಂಬುದರ ಬಗ್ಗೆ ಮಾಧ್ಯಮಗಳಿಂದ ತಿಳಿದುಕೊಂಡಿದ್ದೇನೆ. ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಹಿತದೃಷ್ಟಿಯಿಂದ ಇವರಿಬ್ಬರು ಸಮನ್ವಯತೆಯಿಂದ ಕೆಲಸ ಮಾಡುವುದು ಅತ್ಯಗತ್ಯ. ಇಬ್ಬರನ್ನು ಒಂದೆಡೆ ಸೇರಿಸಿ ಸಮಸ್ಯೆ ನಿವಾರಣೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಡಿಸಿ ಮತ್ತು ಎಸ್ಪಿ ಹೊಂದಾಣಿಕೆಯಿಂದ ಕೆಲಸ ನಿರ್ವಹಿಸುತ್ತಾರೆಂಬ ವಿಶ್ವಾಸವಿದೆ. ಒಂದು ವೇಳೆ ಮಾತು ಮೀರಿದಲ್ಲಿ ಯಾರಿಂದ ಬುದ್ಧಿ ಕಲಿಸಬೇಕೆಂಬುದು ಗೊತ್ತಿದೆ ಎಂದು ಮಾರ್ಮಿಕವಾಗಿ ನುಡಿದರು. ಎಲ್ಲ ಮಾಹಿತಿಗಳ ಕುರಿತು ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.