ನೀರು ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ
ಚಿಂತಾಮಣಿ: ಕುಡಿಯುವ ನೀರು ಪೂರೈಸಲು ವಿಫಲರಾಗಿರುವ ಕಾಗತಿ ಗ್ರಾಪಂ ಅಧ್ಯಕ್ಷೆ, ಪಿಡಿಒ ವಿರುದ್ಧ ಚೊಕ್ಕರೆಡ್ಡಿಹಳ್ಳಿ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಶುಕ್ರವಾರ ಪ್ರತಿಭಟನೆ ನಡೆಸಿದರು. ಗ್ರಾಮಕ್ಕೆ 4 ತಿಂಗಳಿನಿಂದ ಸಮರ್ಪಕವಾಗಿ ನೀರು ಪೂರೈಸಿಲ್ಲ ಎಂದು ಗ್ರಾಪಂ ಅಧ್ಯಕ್ಷೆ ಪದ್ಮಾವತಮ್ಮ ಹಾಗೂ ಪಿಡಿಒ ಲಕ್ಷ್ಮಣ್ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಪಂ ಸದಸ್ಯ ಎನ್.ಶಿವಪ್ಪ ಸ್ಥಳಕ್ಕಾಗಮಿಸಿ, 17 ಸದಸ್ಯರ ಪೈಕಿ ನಾನೊಬ್ಬನೇ ಅಧಿಕಾರಿ ಹಾಗೂ ಅಧ್ಯಕ್ಷರ ಮೇಲೆ ಒತ್ತಡ ಹೇರಿದರೂ ಪ್ರಯೋಜನವಾಗಿಲ್ಲ. ಹಾಲಿ ಅಧ್ಯಕ್ಷರು ಮಾಜಿ ಅಧ್ಯಕ್ಷರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಈ ಬಗ್ಗೆ ತಾಲೂಕು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೂ ದೂರು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು. ಅಲ್ಲದೆ, ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ, ಅಧಿಕಾರಿಗಳ ಜತೆ ಚರ್ಚಿಸಿ ನೀರು ಪೂರೈಕೆ ಬಗ್ಗೆ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಕೈಬಿಡಲಾಯಿತು.