ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹ
ಬಾಗೇಪಲ್ಲಿ: ಕರ್ನಾಟಕವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪಟ್ಟಣದ ಡಾ.ಎಚ್.ಎನ್ ವೃತ್ತದಿಂದ ಮೆರವಣಿಗೆ ತೆರಳಿದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಾಲೂಕು ಕಚೇರಿಗೆ ಆಗಮಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿಯ ಕಾರ್ಯದರ್ಶಿ ಪಿ.ಮಂಜುನಾಥರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಹವಾಮಾನ ವೈಪರೀತ್ಯದ ಪರಿಣಾಮ ಮುಂಗಾರು ವಿಫಲವಾಗಿದೆ. ರಾಜ್ಯದಲ್ಲಿ ಅಂತರ್ಜಲದ ಮಟ್ಟ ಪಾತಾಳಕ್ಕೆ ಕುಸಿದಿದೆ. ಇದರಿಂದ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ನಮ್ಮನ್ನಾಳುವ ಸರ್ಕಾರಗಳು ಕುಡಿಯುವ ನೀರಿನ ಸಮಸ್ಯೆ ಸಮರ್ಪಕವಾಗಿ ನಿವಾರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳು ಗಗನಕ್ಕೆ ಏರಿಕೆಯಾಗುತ್ತಿರುವುದರಿಂದ ಬಡವರು ಜೀವನ ನಡೆಸುವುದು ದುಸ್ತರವಾಗಿದೆ. ಸರ್ಕಾರದಿಂದ ಬಡವರಿಗಾಗಿ ನೀಡುವ ಆಹಾರ ಪದಾರ್ಥಗಳು ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟವಾಗುತ್ತಿವೆ. ರೈತರು ವಿವಿಧ ಬ್ಯಾಂಕ್ಗಳಿಂದ ಪಡೆದಿರುವ ಸಾಲವನ್ನು ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇನ್ನು ಕೆಲವು ರೈತರು ಜೀವನದ ನಿರ್ವಹಣೆಗಾಗಿ ನಗರ ಪ್ರದೇಶಗಳಿಗೆ ಗುಳೆ ಹೋಗುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಮಾತ್ರ ರಾಜ್ಯದ ಜನತೆಯ ಸಮಸ್ಯೆಗಳ ಬಗ್ಗೆ ತಲೆಕೊಡಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಮುಖಂಡರಾದ ಚನ್ನರಾಯಪ್ಪ, ಎಂ.ಎನ್ .ರಘುರಾಮರೆಡ್ಡಿ, ಗೋವರ್ದನಾಚಾರಿ, ಎಚ್.ಎ.ರಾಮಲಿಂಗಪ್ಪ, ಕೆ.ನಾಗರಾಜು, ಎಸ್.ರಾಜಶೇಖರ್, ಹೇಮಚಂದ್ರ, ಜಿಪಂ ಸದಸ್ಯ ಬಿ.ಸಾವಿತ್ರಮ್ಮ, ಚಂದ್ರಶೇಖರರೆಡ್ಡಿ ಮುಂತಾದವರು ಇದ್ದರು.