ಸಿಐಟಿಯು ಪ್ರತಿಭಟನೆ
ಚಿಂತಾಮಣಿ: ಅಸಂಘಟಿತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಿಐಟಿಯು ಹಾಗೂ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರವಾಸಿ ಮಂದಿರದಿಂದ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ನಂತರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಸಿಐಟಿಯು ಹಾಗೂ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಸಂಘಟಿತ ನೂರಾರು ಕಾರ್ಮಿಕರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಅಂಗನವಾಡಿ, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು, ಪಂಚಾಯ್ತಿ ನೌಕರರು ಹಾಗೂ ಕಟ್ಟಡ ಕಾರ್ಮಿಕರು ಸೇರಿದಂತೆ ಎಲ್ಲರಿಗೂ ರಾಷ್ಟ್ರ ವ್ಯಾಪ್ತಿಯ ಸಮಾನ ಕನಿಷ್ಠ ವೇತನ 15000 ನಿಗದಿ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸಿ.ಐ.ಟಿ.ಯು ಜಿಲ್ಲಾಧ್ಯಕ್ಷ ಸಿದ್ದಗಂಗಪ್ಪ, ಜಿಲ್ಲಾ ಕಾರ್ಯದರ್ಶಿ ಸಿ.ಗೋಪಿನಾಥ್ ಮಾತನಾಡಿದರು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿದೇವಮ್ಮ, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಸೌಭಾಗ್ಯ, ಉಪಾಧ್ಯಕ್ಷೆ ವಿಜಯಲಕ್ಷ್ಮಿ, ಕಾರ್ಯದರ್ಶಿ ಎಚ್.ಜಿ.ಲಕ್ಷ್ಮಿ ನರಸಮ್ಮ, ಪಿ.ವಿ.ಅಶ್ವತ್ಥಮ್ಮ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಪಂಚಾಯ್ತಿ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.