ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳೇ ಉತ್ತಮ
ಬಂಗಾರಪೇಟೆ: ಕ್ಷೇತ್ರದಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಮೂಲಭೂತ ಸೌಲಭ್ಯ ಒದಗಿಸಿ ಗುಣಾತ್ಮಕ ಶಿಕ್ಷಣ ನೀಡಿ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಕಡಿಮೆ ಇಲ್ಲ ಎಂಬುದನ್ನು ಸಾಬೀತು ಮಾಡಲಾಗುವುದು ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.
ತಾಲೂಕಿನ ದೊಡ್ಡಪನ್ನಾಂಡಹಳ್ಳಿ ಸರ್ಕಾರಿ ಪ್ರೌಢಶಾಲೆಯ ಡಾ.ನಂಜುಂಡಪ್ಪ ವರದಿ ಅನುಸಾರ ಹಿಂದುಳಿದ ಜಿಲ್ಲೆಗಳಲ್ಲಿ ವಿಶೇಷ ಹೆಚ್ಚುವರಿ ಕೊಠಡಿ 6.5 ಲಕ್ಷ ಮೊತ್ತದ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ಮಾತನಾಡಿ, ಎಲ್ಲ ಸರ್ಕಾರಿ ಶಾಲೆಗಳಿಗೆ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ, ಶಾಲಾ ಕೊಠಡಿಗಳು, ಕಾಂಪೌಂಡ್, ವಿದ್ಯುತ್, ಅಡುಗೆ ಮನೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು. ಕೊರತೆ ಇರುವ ಕಡೆ ಮಾಹಿತಿ ನೀಡಿದಲ್ಲಿ ತಕ್ಷಣ ಮಂಜೂರು ಮಾಡಲಾಗುವುದು ಎಂದರು. ಗ್ರಾಮೀಣ ಗಡಿ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕರು ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಅವರನ್ನು ದೇಶದ ಉತ್ತಮ ಪ್ರಜೆಗಳಾಗಿ ಬೆಳೆಸಬೇಕು. ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಇದನ್ನು ಶಿಕ್ಷಕರ ಮುಖಂಡರು ಜಾರಿಗೊಳಿಸಲು ಮುಂದಾಗಬೇಕು. ಪೋಷಕರು ತಮ್ಮ ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಬೇಕು, ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗದಂತೆ ಮಕ್ಕಳಿಗೆ ಸಹಕಾರ ನೀಡಬೇಕೆಂದರು. ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎ.ಪಾರ್ಥಸಾರಥಿ, ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಯರಾಜ್, ಗ್ರಾಪಂ ಅಧ್ಯಕ್ಷ ಟಿ.ಎಂ.ಲಕ್ಷ್ಮಣರಾವ್, ಗ್ರಾಪಂ ಮಾಜಿ ಅಧ್ಯಕ್ಷ ಶಂಕರಪ್ಪ, ಪಿಡಿಒ ಚಂದ್ರಪ್ಪ, ಮುಖಂಡರಾದ ಸಿದ್ದೂಜಿಗೌಡ, ಎಸ್ಡಿಎಂಸಿ ಅಧ್ಯಕ್ಷ ರಾಮೋಜಿರಾವ್ ಮತ್ತು ಸದಸ್ಯರು, ಮುಖ್ಯ ಶಿಕ್ಷಕ ಅಮರೇಶ್ ಮೊದಲಾದವರು ಹಾಜರಿದ್ದರು.