ಬರಗೆಟ್ಟ ಸರ್ಕಾರದ ವಿರುದ್ಧ ಪ್ರತಿಭಟನೆ ಆ.7ಕ್ಕೆ
ಚಿಕ್ಕಬಳ್ಳಾಪುರ: ಬರಪೀಡಿತ ತಾಲೂಕುಗಳಲ್ಲಿ ಪರಿಹಾರ ಕಾರ್ಯಕ್ರಮಗಳನ್ನು ಸಮರ್ಪಕ ರೀತಿಯಲ್ಲಿ ಕೈಗೊಳ್ಳಬೇಕೆಂದು ಆಗ್ರಹಿಸಿ ಆ.7ರಂದು ರಾಜ್ಯದ ತಾಲೂಕು ಕಚೇರಿಗಳ ಮುಂದೆ ಧರಣಿ ನಡೆಸಲು ಕರ್ನಾಟಕ ಪ್ರಾಂತ ರೈತ ಸಂಘ ಮುಂದಾಗಿದೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಆರ್‌ಸಿ ಜಿಲ್ಲಾಧ್ಯಕ್ಷ ಗೋಪಿನಾಥ್, ಅಂತರ್ಜಲ ಮತ್ತು ಮಳೆಯ ಸಮಸ್ಯೆಯಿಂದ ನಲುಗುತ್ತಿರುವ ಜಿಲ್ಲೆಯಲ್ಲಿ ಕಳೆದ ಎರಡ್ಮೂರು ವರ್ಷಗಳಿಂದ ಬರ ಕಾಡುತ್ತಿದೆ. ಈ ಬಾರಿಯೂ ಮಳೆ ಕೊರತೆಯನ್ನು ಜಿಲ್ಲೆ ಎದುರಿಸಿದೆ. ಇದನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದರು. ಜೂ.15ರಂದು ನಿಯೋಗ ತೆರಳಿ ಬರದ ಬಗ್ಗೆ ಕಂದಾಯ ಸಚಿವರ ಗಮನ ಸೆಳೆದಾಗ ಅವರು ಬರ ನಿರ್ವಹಣೆಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಣ ನೀಡಲಾಗಿದೆ ಎಂದಿದ್ದರು. ಆದರೆ, ಇಲ್ಲಿ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳತ್ತಿಲ್ಲ. ಪ್ರಸ್ತುತ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಕ್ಕಾಗಿ ಬೇರೆಡೆಗೆ ವಲಸೆ ಹೋಗುವುದು ಹೆಚ್ಚಾಗಿದೆ. ಇತ್ತ ಉದ್ಯೋಗ ಖಾತ್ರಿ ಯೋಜನೆಯು ಜನರ ಬದಲಿಗೆ ಗುತ್ತಿಗೆದಾರರಿಗೆ ಅನುಕೂಲವಾಗುತ್ತಿದೆ. ಎಲ್ಲೆಡೆ ಜೆಸಿಬಿ ಯಂತ್ರಗಳನ್ನು ಬಳಸಿ ಕೆಲಸ ಮಾಡುತ್ತಿದ್ದು ಉದ್ಯೋಗ ಸಮಸ್ಯೆ ದೂರವಾಗುತ್ತಿಲ್ಲ ಎಂದರು.
ಮಳೆಯ ಕೊರತೆಯಿಂದ ನಷ್ಟವನ್ನು ಅನುಭವಿಸಿರುವ ರೈತರಿಗೆ ಪರಿಹಾರ ನೀಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಉಂಟಾಗಿದ್ದು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಜಾನುವಾರುಗಳ ಮೇವಿನ ಕೊರತೆ ನೀಗಿಸಲು ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಗೋ ಶಾಲೆಗಳನ್ನು ತೆರೆಯಬೇಕು. ಹಾಲು ಉತ್ಪಾದಕರ ಸಂಘಗಳ ಮೂಲಕ ರೈತರಿಗೆ ರಿಯಾಯಿತಿ ದರದಲ್ಲಿ ಮೇವು ವಿತರಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಆ.7ರಂದು ರಾಜ್ಯಾದಂತ ಪ್ರತಿಭಟನೆ ನಡೆಸಲಾಗುತ್ತಿದೆ. ಆ ನಂತರ ಸಹ ಸರ್ಕಾರ ಎಚ್ಚೆತ್ತುಕೊಳ್ಳದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದರು. ಸಂಘದ ಜಿಲ್ಲಾ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ, ಕೆಪಿಆರ್‌ಎಸ್ ಜಿಲ್ಲಾ ಕಾರ್ಯದರ್ಶಿ ಚೆನ್ನರಾಯಪ್ಪ, ತಾಲೂಕು ಸಂಚಾಲಕ ಬಿ.ಎನ್ .ಮುನಿಕೃಷ್ಣಪ್ಪ, ಮುಖಂಡರಾದ ರಾಮಲಿಂಗಪ್ಪ, ಪಿ.ಮಂಜುನಾಥರೆಡ್ಡಿ, ಎಚ್ .ಪಿ.ಲಕ್ಷ್ಮಿನಾರಾಯಣರೆಡ್ಡಿ, ಶ್ರೀನಿವಾಸ್, ಚಂದ್ರಶೇಖರರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.