12ಕ್ಕೆ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ
ಚಿಕ್ಕಬಳ್ಳಾಪುರ: ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಜೂ.12 ರಂದು ಬೆಳಿಗ್ಗೆ 10 ಗಂಟೆಗೆ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಜಾಥಾ ಕಾರ್ಯಕ್ರಮ ಮತ್ತು ಕಾನೂನು ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘ ಆಯೋಜಿಸಿರುವ ಜಾಥಾ ಕಾರ್ಯಕ್ರಮವು ಜೂ.12 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಬಿ.ಬಿ.ರಸ್ತೆಯಲ್ಲಿರುವ ಸರ್ಕಾರಿ ಜೂನಿಯರ್ ಕಾಲೇಜು ಆವರಣದಿಂದ ಪ್ರಾರಂಭವಾಗಲಿದೆ. ಇದಕ್ಕೆ ಅಪರ ಜಿಲ್ಲಾ ಸತ್ರ ನ್ಯಾಯಾಧೀಶ ಜಿ.ವಿ. ತುರಮರಿ ಚಾಲನೆ ನೀಡಲಿದ್ದಾರೆ. ನಂತರ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಕಾನೂನು ಕಾರ್ಯಾಗಾರದ ಉದ್ಘಾಟನೆಯನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎ.ಎಸ್ .ಬೆಳ್ಳುಂಕೆ ನೆರವೇರಿಸಲಿದ್ದು ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷ ಡಾ.ಆರ್ .ವಿಶಾಲ್ ವಹಿಸಲಿದ್ದಾರೆ.
ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್ , ಜಿಲ್ಲಾ ರಕ್ಷಣಾಧಿಕಾರಿ ಡಾ.ದಿವ್ಯಾ ವಿ.ಗೋಪಿನಾಥ್, ಅಪರ ಜಿಲ್ಲಾ ಸತ್ರ ನ್ಯಾಯಾಧೀಶ ಜಿ.ವಿ. ತುರಮರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಎಸ್ .ಶೋಭಾ ಸೇರಿ ಪ್ರಮುಖರು ಭಾಗವಹಿಸಲಿದ್ದಾರೆ.