ಬೀಜ, ಗೊಬ್ಬರ ಸಮಸ್ಯೆ ಆಗದಂತೆ ನೋಡಿಕೊಳ್ಳಿ
ಚಿಕ್ಕಬಳ್ಳಾಪುರ: ಮುಂಗಾರು ಆಗಮನದ ಹಿನ್ನೆಲೆಯಲ್ಲಿ ಬಿರುಸಿನಿಂದ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವುದರ ನಡುವೆ ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಸಮಸ್ಯೆ ಸೇರಿದಂತೆ ಬೇರೆ ಬೇರೆ ಗೊಂದಲಗಳು ಉಂಟಾಗದಂತೆ ನೋಡಿಕೊಳ್ಳಬೇಕೆಂದು ಜಿ.ಪಂ. ಅಧ್ಯಕ್ಷ ಕೇಶವರೆಡ್ಡಿ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಿ.ಪಂ. ಸಭಾಂಗಣದಲ್ಲಿ ಬುಧವಾರ ನಡೆದ ಕೆಡಿಪಿ ಮಾಸಿಕ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡ ಅವರು, ದೂರುಗಳಿಗೆ ಅವಕಾಶ ನೀಡದಂತೆ ಸಮರ್ಪಕ ರೀತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತ ಉತ್ತಮವಾಗಿ ಕಾರ್ಯ ನಿರ್ವಹಿಸಬೇಕೆಂದು ಇದೇ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳಿಗೆ ಸಲಹೆ ನೀಡಿದರು.
ಅನಿರೀಕ್ಷಿತ ಭೇಟಿ ನೀಡಿದ ಸಂದರ್ಭದಲ್ಲಿ ದೂರುಗಳು ತಮಗೆ ಕೇಳಿ ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂತಲೂ ಎಚ್ಚರಿಕೆ ನೀಡಿದರು.
ತಮ್ಮ ಇಲಾಖೆಯಿಂದ ಜಿಲ್ಲೆಯಲ್ಲಿ 114 ಹೆಕ್ಟೇರ್ ಪ್ರದೇಶದ ಗುರಿಯಲ್ಲಿ 44 ಹೆಕ್ಟೇರ್ ಪ್ರದೇಶದಲ್ಲಿ ಸುಮಾರು 45 ಸಾವಿರ ಗಿಡಗಳನ್ನು ಬೆಳೆಸಲು ಮುಂದಾಗಿದ್ದು ನಿಗದಿಪಡಿಸಿಕೊಂಡಿರುವ ಪ್ರದೇಶಗಳಲ್ಲಿ ಗುಂಡಿಗಳನ್ನು ಸಹ ಅಗೆಯಲಾಗಿದೆ. ಮಳೆಯನ್ನು ನೋಡಿಕೊಂಡು ಕೆಲಸವನ್ನು ಪ್ರಾರಂಭಿಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿ ತಿಳಿಸಿದರು.
ಸಮನ್ವಯ ಸಾಧಿಸಿ: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳ ವಿರುದ್ಧ ಜಾಗೃತಿ ಮೂಢಿಸಲು ವಿವಿಧ ಇಲಾಖೆಯಗಳಿಂದ ಸಮನ್ವಯ ಸಾಧಿಸಿ ಸಮರೋಪಾದಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿ.ಪಂ. ಅಧ್ಯಕ್ಷ ಕೇಶವರೆಡ್ಡಿ ಸೂಚಿಸಿದರು.
ಕಳೆದ ವರ್ಷ 8 ಮಂದಿ ಡೆಂಗ್ಯು ಜ್ವರದಿಂದ ಮೃತಪಟ್ಟಿರುವುದು ವರದಿಯಾಗಿದೆ. ಪ್ರಸ್ತುತ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿಗಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಜಾಗೃತಿ ಮೂಡಿಸುತ್ತಿದ್ದು ಇದಕ್ಕೆ ಜನರು ಸಹಕಾರ ನೀಡಿ ಸೊಳ್ಳೆಗಳು ಹೆಚ್ಚಿಗೆ ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಮತ್ತು ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗಸ್ವಾಮಿ ತಿಳಿಸಿದರು. ಸಭೆಯಲ್ಲಿ ಜಿ.ಪಂ. ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ನಾರಾಯಣಮ್ಮ, ರಜನಿ ವೇಣುಗೋಪಾಲರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.