ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅಧ್ಯಕ್ಷ ಸ್ಥಾನಕ್ಕೆ ಹನುಮಂತಪ್ಪ ಆಯ್ಕೆ ಮಾಡಿ

Rashmi Kasaragodu
Updated On : 13 Jun 2014, 2:20 am

ಚಿಂತಾಮಣಿ: ತಾಲೂಕು ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕ ಸಿ.ಬಿ. ಹನುಮಂತಪ್ಪನವರನ್ನು ಆಯ್ಕೆ ಮಾಡುವುದು ಸೂಕ್ತವೆಂದು ತಾಲೂಕು ಕನ್ನಡ ಸಾಹಿತ್ಯ ವೇದಿಕೆ ಹಾಗೂ ಚುಟುಕು ಸಾಹಿತ್ಯ ಪರಿಷತ್ತುಗಳು ಅಭಿಪ್ರಾಯ ವ್ಯಕ್ತಪಡಿಸಿವೆ.
ನಗರದ ಅಂಜನಿ ಬಡಾವಣೆಯಲ್ಲಿರುವ ಸಾಹಿತ್ಯ ವೇದಿಕೆ ಕಾರ್ಯಾಲಯದಲ್ಲಿ ವೇದಿಕೆಯ ಅಧ್ಯಕ್ಷರಾದ ಕಾಗತಿ ವಿ. ವೆಂಕಟರತ್ನಂ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ಸಾಹಿತ್ಯ ವೇದಿಕೆ ಹಾಗೂ ಚುಟುಕು ಸಾಹಿತ್ಯ ವೇದಿಕೆ ಪದಾಧಿಕಾರಿಗಳ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರ ಆಯ್ಕೆ ಸಂಬಂಧವಾಗಿ ನಡೆದ ಚರ್ಚೆಯಲ್ಲಿ ಈ ಬಗ್ಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು. ಸಿ.ಬಿ. ಹನುಮಂತಪ್ಪನವರು ಶಿಕ್ಷಕರಾಗಿ, ಮುಖ್ಯಶಿಕ್ಷಕರಾಗಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ, ಸರ್ವಶಿಕ್ಷಣ ಅಭಿಯಾನದ ಜಿಲ್ಲಾ ಉಪ ನಿರ್ದೇಶಕರಾಗಿ, ವಯಸ್ಕರ ಶಿಕ್ಷಣ ಸಮಿತಿಯ ಜಿಲ್ಲಾಧಿಕಾರಿಯಾಗಿ, ಸಾಕ್ಷರತಾ ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿರುವುದರ ಜೊತೆಗೆ ಅನೇಕ ಕವನ, ಲೇಖನ, ಚುಟುಕು, ಹಾಡು ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಹಲವು ಸಾಹಿತ್ಯಿಕ ಕೃತಿಗಳನ್ನು ರಚಿಸಿದ್ದಾರೆ. ಇವರ ಹಲವಾರು ಬರಹಗಳು ಈಗಾಗಲೇ ನಾಡಿನ ಹಲವು ಪತ್ರಿಕೆಗಳಲ್ಲೂ, ನಿಯಮ ಕಾಲಿಕೆಗಳಲ್ಲೂ ಪ್ರಕಟಗೊಂಡು ಓದುಗರ ಗಮನ ಸೆಳೆದಿವೆ. ಕೆಲವು ಧ್ವನಿ ಮುದ್ರಿಕೆಗಳನ್ನು ಹೊರ ತಂದಿದ್ದಾರೆ.
ತಾಲೂಕಿನಲ್ಲಿ ನಡೆಯುವ ಕನ್ನಡ ಪರ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದಲ್ಲದೆ ಹಲವು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶಕರು ಆಗಿದ್ದಾರೆ. ಕ್ರಿಯಾಶೀಲ ವ್ಯಕ್ತಿಯಾಗಿರುವ ಹನುಮಂತಪ್ಪನವರ ಸಾಧನೆ ಮತ್ತು ಸೇವೆಯನ್ನು ಪರಿಗಣಿಸಿ ಮುಂದಿನ ತಿಂಗಳಲ್ಲಿ ನಡೆಯಲಿರುವ ತಾಲೂಕು ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವುದು ಸಮಂಜಸವಾಗಿದೆ ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತೆಂದು ಚುಸಾಪ ಪ್ರಧಾನ ಕಾರ್ಯದರ್ಶಿ ರಾಯಲ್ ಮಂಜುನಾಥ್ ಹೇಳಿಕೆಯಲ್ಲಿ ವಿವರಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement