ಸಮಾಜ ಕಲ್ಯಾಣ ಇಲಾಖೆ ಅವ್ಯವಹಾರ: ಸಿಎಂಗೆ ಮನವಿ
ಕೋಲಾರ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಐದು ವರ್ಷದ ಅವಧಿಯಲ್ಲಿ ಸುಮಾರು ಹತ್ತು ಕೋಟಿ ರು.ಗಳ ಅವ್ಯವಹಾರ ನಡೆದಿದ್ದು ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ದಲಿತ ಮುಖಂಡರು ಸಿಎಂ ಸಿದ್ದರಾಮಯ್ಯನವರನ್ನು ಒತ್ತಾಯಿಸಿದ್ದಾರೆ.
ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗದ ಅಧ್ಯಕ್ಷ ಎಂ.ಮುನಿರಾಜು ಮತ್ತು ಪ್ರಧಾನ ಕಾರ್ಯದರ್ಶಿ ಹಾರೋಹಳ್ಳಿ ನಾರಾಯಣಸ್ವಾಮಿ ಇನ್ನಿತರರು ಇತ್ತೀಚೆಗೆ ಮುಖ್ಯಮಂತ್ರಿಗಳನ್ನು ವಿಧಾನಸೌಧದಲ್ಲಿ ಭೇಟಿಯಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಲವು ವರ್ಷಗಳಿಂದ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ತಕ್ಷಣ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ತನಿಖೆ ಕೈಗೊಂಡು ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆಂದು ಮುಖಂಡರಾದ ಮುನಿರಾಜು ಮತ್ತು ನಾರಾಯಣಸ್ವಾಮಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿಯ ಭೇಟಿಗೆ ಮುನ್ನ ಸಮಾಜ ಕಲ್ಯಾಣ ಸಚಿವರಾದ ಎಚ್.ಆಂಜನೇಯ ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರದ ದಾಖಲೆಗಳನ್ನು ನೀಡಲಾಯಿತು ಎಂದು ತಿಳಿಸಿದ್ದಾರೆ. ನಿಯೋಗದಲ್ಲಿ ಕಾರ್ ಶ್ರೀನಿವಾಸ್, ಸುರೇಶ್ ಮುಂತಾದವರು ಇದ್ದರೆಂದು ಹೇಳಿದ್ದಾರೆ.