ನೀರು ಶುದ್ಧೀಕರಣ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ
ಮಾಲೂರು: ಕೋಲಾರ ಜಿಲ್ಲೆ ಸೇರಿದಂತೆ ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ ಹಾಗೂ ಬೆಂಗಳೂರಿನ ಕೊಳಚೆ ನೀರನ್ನು ಶುದ್ಧೀಕರಿಸಿ ಜಿಲ್ಲೆಯ ಕೆರೆಗಳಿಗೆ ನೀರು ಹರಿಸುವ ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲೆಯ 5 ಸಾವಿರಕ್ಕೂ ಹೆಚ್ಚು ರೈತರು ಜೂ.23ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಅಬ್ಬಣ್ಣಿ ಶಿವಣ್ಣ ಹೇಳಿದ್ದಾರೆ.
ತಾಲೂಕಿನ ಚಿಕ್ಕತಿರುಪತಿ ಗ್ರಾಮದ ಬ್ರಾಹ್ಮಣರ ಕಲ್ಯಾಣ ಮಂಟಪದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಸಭೆಯಲ್ಲಿ ಅವರು ಮಾತನಾಡಿದರು. ಬೆಂಗಳೂರಿನ ಕೊಳಚೆ ನೀರು ವರ್ತೂರು- ಮುಗಳೂರು ಮೂಲಕ ವ್ಯರ್ಥವಾಗಿ ತಮಿಳುನಾಡಿಗೆ ಸೇರುತ್ತಿದ್ದು, ಅಲ್ಲಿನ ರೈತರು ಅದನ್ನು ಕೃಷಿಗೆ ಬಳಸುತ್ತಿದ್ದಾರೆ. ಈ ಕೊಳಚೆ ನೀರನ್ನು ಶುದ್ಧೀಕರಿಸಿ ಕೆರೆಗಳಿಗೆ ಹರಿಸಿದರೆ ಅಂತರ್ಜಲ ಹೆಚ್ಚಾಗಿ ನೀರಿನ ಸಮಸ್ಯೆ ಬಗೆಹರಿಯಲಿದೆ. ಸಾವಿರಾರು ಕೋಟಿ ರು. ವೆಚ್ಚ ಮಾಡಿ ಸಾವಿರಾರು ಮೈಲು ದೂರದಿಂದ ನೀರನ್ನು ತರುವುದು ಸುಲಭದ ಮಾತಲ್ಲ. ಆ ಯೋಜನೆ ಪೂರ್ಣವಾಗಬೇಕಾದರೆ ಹತ್ತಾರು ವರ್ಷಗಳಾಗಬಹುದು. ಅದಕ್ಕೂ ಮುಂಚೆ ಅತಿ ಕಡಿಮೆ ಖರ್ಚಿನಲ್ಲಿ ಬೆಂಗಳೂರಿನ ಕೊಳಚೆ ನೀರನ್ನು ಶುದ್ಧೀಕರಿಸಿ ನೀರು ಹರಿಸುವ ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಒತ್ತಾಯಿಸಲು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಶಿವಣ್ಣ ಹೇಳಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಅಶ್ವಥ್ ರೆಡ್ಡಿ, ರೈತ ಮುಖಂಡ ಎಟ್ಟುಕೋಡಿ ವೀರಭದ್ರಪ್ಪ, ತಾಲೂಕು ಅಧ್ಯಕ್ಷ ಬೆಂಡಶೆಟ್ಟಿಹಳ್ಳಿ ರಮೇಶ್ ಮಾತನಾಡಿದರು.