ಶಾಸಕರ ಅಸಮಾಧಾನ
ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಚೇನಹಳ್ಳಿ ಹೋಬಳಿಯನ್ನು ಅಧಿಕಾರಿಗಳು ಕಡೆಗಣಿಸಿದ್ದಾರೆ ಎಂದು ಶಾಸಕ ಕೆ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿ.ಪಂ. ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿದ್ದರೂ ಸಹ ಮಂಚೇನಹಳ್ಳಿ ಗೌರಿಬಿದನೂರು ತಾಲೂಕಿಗೆ ಸೇರಿರುವುದರಿಂದ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ. ಯಾವುದೇ ಯೋಜನೆಗಳು ಕಾರ್ಯ ರೂಪಕ್ಕೆ ಬರುತ್ತಿಲ್ಲ. ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಕೆಲಸ ಕೈಗೊಳ್ಳುವಲ್ಲೂ ನಿರ್ಲಕ್ಷ್ಯ ತೋರಲಾಗುತ್ತಿದೆ. ಮಂಚೇನಹಳ್ಳಿ ಹೋಬಳಿಯ ಕೆಲ ಕುಗ್ರಾಮಗಳಲ್ಲಿ ಒಂದು ಪಡಿತರ ಚೀಟಿಯನ್ನು ಸಹ ವಿತರಿಸಿಲ್ಲ. ಈ ಬಗ್ಗೆ ಜನರು ದೂರುಗಳನ್ನು ಕೊಡುತ್ತಿದ್ದು ಅಧಿಕಾರಿಗಳನ್ನು ಪ್ರಶ್ನಿಸಿ ಸಾಕಾಗಿ ಹೋಗಿದೆ ಎಂದರು.
ಚಿಕ್ಕಬಳ್ಳಾಪುರದಲ್ಲಿ ಜವಳಿ ಪಾರ್ಕ್ ನಿರ್ಮಿಸಲು ಸರ್ಕಾರ ಘೋಷಣೆ ಮಾಡಿದ್ದು, ಇದಕ್ಕಾಗಿ ಭೂಮಿ ಗುರುತಿಸಲು ಮುಂದಾಗಬೇಕೆಂದು ಜವಳಿ ಮತ್ತು ಕೈ ಮಗ್ಗ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕೊಳವೆ ಬಾವಿಗಳನ್ನು ಕೊರೆಸಿದ್ದರೂ ಪಂಪ್ ಮೋಟಾರ್ ಅಳವಡಿಸದೇ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಇದರಿಂದ ನೀರು ಬತ್ತಿದ್ದು, ಜನ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದರು.