ಧೂಮಪಾನದಿಂದ 20 ಸಾವಿರ 'ಹೊಗೆ'
ಕೋಲಾರ: ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆಯ ಜಾಗೃತ ದಳ ಕಳೆದ ಒಂದು ತಿಂಗಳಿಂದೀಚೆಗೆ ದಾಳಿ ನಡೆಸಿ ಕಾನೂನು ಉಲ್ಲಂಘನೆ ಮಾಡಿ ಧೂಮಪಾನ ಮಾಡಿರುವವರಿಂದ 20 ಸಾವಿರ ದಂಡ ವಸೂಲಿ ಮಾಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಡಾ.ಪಯಾಜ್ ಖಾನ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿ ಕಾನೂನು ಉಲ್ಲಂಘನೆ ಮಾಡಿದ 340 ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಜಾಗೃತಿ ದಳದಿಂದ ದಂಡ ವಸೂಲಿ ಮಾಡಲಾಗಿದೆ. 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಶಾಲಾ ಕಾಲೇಜುಗಳ 100 ಮೀ. ವ್ಯಾಪ್ತಿಯಲ್ಲಿ ತಂಬಾಕು ಉತ್ಪನಗಳನ್ನು ಮಾರುವುದನ್ನು ನಿಷೇಧಿಸಲಾಗಿದೆ. ಕಾನೂನು ಉಲ್ಲಂಘನೆಗಾಗಿ 200 ದಂಡ ವಿಧಿಸಲಾಗುವುದೆಂದು ಎಚ್ಚರಿಸಿದರು.
ಸೀಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಆರೋಗ್ಯದ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರುವುದರ ನಿಷೇಧ ಮಾಡಲಾಗಿದ್ದು, ಉತ್ಪಾದಕರಿಗೆ 2 ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರ ದಂಡ ವಿಧಿಸಲಾಗುತ್ತದೆ ಎಂದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಮೀಲ್ ಮಾತನಾಡಿ, ಪೊಲೀಸ್ ಇಲಾಖೆಯಿಂದ ಸುಮಾರು 43 ಸಾವಿರ ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ಡಿ.ಕೆ.ರವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸುಮಾರು 1.42 ಲಕ್ಷ ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕಾನೂನು ಅನುಷ್ಠಾನಗೊಳಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ಜಯಣ್ಣ, ಸಂಯೋಜಕ ಮಹಮದ್ ಇದ್ದರು.