ಆಟೋಗಳ ಉಪಟಳಕ್ಕೆ ಕಡಿವಾಣ ಎಂದು?
ಬಾಗೇಪಲ್ಲಿ: ಕಾನೂನು ಬಾಹಿರವಾಗಿ ಸಂಚರಿಸುತ್ತಿರುವ ಆಟೋಗಳಿಗೆ ಕಡಿವಾಣ ಹಾಕುವಲ್ಲಿ ಸ್ಥಳೀಯ ಪೊಲೀಸರು ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ತಾಲೂಕಿನ ಕೆಲವು ಗ್ರಾಮೀಣ ಪ್ರದೇಶಗಳಿಗೆ ಸರ್ಕಾರಿ ಬಸ್ ಸೌಲಭ್ಯದ ಕೊರತೆ ಇರುವುದರಿಂದ ಆಟೋಗಳನ್ನೇ ಅವಲಂಬಿಸಿದ್ದು, ಪಟ್ಟಣದ ವಿವಿಧ ಶಾಲಾ ಕಾಲೇಜುಗಳಿಗೆ ತಾಲೂಕಿನ ವಿವಿಧ ಗ್ರಾಮಗಳಿಂದ ಪ್ರತಿನಿತ್ಯವೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಟೋಗಳಲ್ಲಿಯೇ ಬಂದು ಹೋಗುತ್ತಾರೆ. ಆದರೆ, ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಆಟೋಗಳಿಗೆ ಪರವಾನಗಿ ಇಲ್ಲ. ಅನೇಕರು ಡ್ರೈವಿಂಗ್ ಲೈಸನ್ಸ್ ಹೊಂದಿಲ್ಲ. ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತಿದ್ದರೂ ತಮಗೆ ಸಂಬಂಧವೇ ಇಲ್ಲ ಎನ್ನುವಂತೆ ಸ್ಥಳೀಯ ಪೊಲೀಸರು ಹಾಗೂ ಆರ್ಟಿಒ ಅಧಿಕಾರಿಗಳು ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.