ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪಾರದರ್ಶಕ, ಮುಕ್ತ ಮತದಾನಕ್ಕೆ ಸಜ್ಜಾಗಿ: ಡಿಸಿ

Srinivasa Murthy VN
Updated On : 14 Mar 2014, 12:38 pm

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯನ್ನು ಪಾರದರ್ಶಕವಾಗಿ ಕೈಗೊಳ್ಳಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು ಲೋಪದೋಷಗಳಿಗೆ ಆಸ್ಪದ ನೀಡದಿರಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವಿಶಾಲ್ ತಿಳಿಸಿದರು.
ಜಿ.ಪಂ. ಸಭಾಂಗಣದಲ್ಲಿ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ಮೂರು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಎಲ್ಲಾ ಕಡೆ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುವ ಸಲುವಾಗಿ ಸೂಕ್ತ ರೀತಿಯಲ್ಲಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ ಎಂದರು.
ಈ ಹಿಂದಿನ ಚುನಾವಣೆಯಲ್ಲಿ ಶೇ.85 ರಷ್ಟು ಮತದಾನ ಆಗಿತ್ತು. ಶಾಂತಿಯುತ ಮತದಾನದಿಂದ ಮೆಚ್ಚುಗೆಗೆ ಪಾತ್ರವಾಗಿದ್ದು ಈ ಬಾರಿಯು ಸಹ ಯಶಸ್ವಿಯಾಗಿ ಚುನಾವಣೆಯನ್ನು ಮುಗಿಸಬೇಕಾಗಿದೆ. ಇದಕ್ಕಾಗಿ ಪೊಲೀಸ್, ಅಬಕಾರಿ ಇಲಾಖೆ, ಚುನಾವಣಾಧಿಕಾರಿಗಳು, ತಹಸೀಲ್ದಾರ್‌ಗಳು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳ ಸಭೆಯನ್ನು ನಡೆಸಿ ಈಗಾಗಲೇ ಚರ್ಚೆ ನಡೆಸಲಾಗಿದೆ ಎಂದರು.
ಚುನಾವಣಾ ನೀತಿ ಸಂಹಿತೆಯು ಎಲ್ಲೂ ಉಲ್ಲಂಘನೆಯಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾವಹಿಸಲಿದ್ದಾರೆ ಎಂದ ಅವರು, ಮತದಾರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಮಾ.16 ರವರೆಗೂ ಅವಕಾಶವನ್ನು ನೀಡಲಾಗಿದೆ.ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸರ್ಕಾರದ ಸಾಧನೆಗಳ ಕುರಿತ ಬ್ಯಾನರ್‌ಗಳನ್ನು ತೆರವುಗೊಳಿಸಲಾಗಿದೆ. ರಾಜಕೀಯ ಪಕ್ಷಗಳು ಸಹ ಎಲ್ಲಿಯೂ ತಮ್ಮ ಬ್ಯಾನರ್, ಪೋಸ್ಟರ್ ಅಂಟಿಸದಂತೆ ಸೂಚನೆ ನೀಡಲಾಗಿದೆ ಎಂದ ಅವರು, ಜಿಲ್ಲೆಯಲ್ಲಿನ 2194 ಮತಗಟ್ಟೆಗಳಲ್ಲಿ ಮತದಾನ ಸೂಕ್ತ ರೀತಿಯಲ್ಲಿ ನಡೆಯಲು ಸಕಲ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ಇನ್ನೂ ಚುನಾವಣೆಗಾಗಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ವಾಹನ ಹಾಗೂ ಇನ್ನಿತರ ಸವಲತ್ತುಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದರು.
ಸಭೆಯಲ್ಲಿ ಎಸ್ಪಿ ದಿವ್ಯಾ ಗೋಪಿನಾಥ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement