ಪ್ರತಿಭೆ ಅನಾವರಣಕ್ಕೆ ಪ್ರೋತ್ಸಾಹ ಅಗತ್ಯ: ಸಿದ್ದಲಿಂಗಪ್ಪ
ಗುಡಿಬಂಡೆ: ಪ್ರತಿಯೊಂದು ಮಗುವೂ ತನ್ನದೇ ಆದ ಪ್ರತಿಭೆಯನ್ನು ಹೊಂದಿದ್ದು, ಪ್ರೋತ್ಸಾಹ ಕೊರತೆಯಿಂದ ತಮ್ಮಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ಮುಂದಾಗುವುದಿಲ್ಲ. ಈ ನಿಟ್ಟಿನಲ್ಲಿ ಪೋಷಕರು ಹಾಗೂ ಶಿಕ್ಷಕರು ಮಕ್ಕಳಿಗೆ ಪ್ರೋತ್ಸಾಹ ನೀಡಿದಾಗ ಮಾತ್ರ ಮಕ್ಕಳು ತಮ್ಮ ಪ್ರತಿಭೆ ಹೊರಹಾಕಲು ಮುಂದಾಗುತ್ತಾರೆಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು.
ಪಟ್ಟಣದ ನ್ಯೂ ಪಬ್ಲಿಕ್ ಶಾಲೆ ಆವರಣದಲ್ಲಿ ಬೆಂಗಳೂರಿನ ಬಾಲಭವನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಂತರ್ಶಾಲಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಅಡಗಿರುವ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಅಗತ್ಯವಾಗಿದ್ದು, ಮಕ್ಕಳಿಗೆ ವೇದಿಕೆ ಕಲ್ಪಿಸುವಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರಿನ ಬಾಲಭವನ ಉತ್ತಮ ಕೆಲಸ ಮಾಡುತ್ತಿವೆ ಎಂದು ತಿಳಿಸಿದರು.
ಶಿಕ್ಷಣ ಇಲಾಖೆ ಅಧಿಕಾರಿ ಶಿವಪ್ರಕಾಶ್ ಮಾತನಾಡಿ, ಮಕ್ಕಳಲ್ಲಿನ ಪ್ರತಿಭೆಗಳನ್ನು ಪೋಷಕರು ಹಾಗೂ ಶಿಕ್ಷಕರು ಗುರ್ತಿಸಬೇಕಾಗಿದೆ. ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಸಾಂಸ್ಕೃತಿಕ ನೆಲೆಗಟ್ಟು ರೂಪಿಸುವಲ್ಲಿ ಪೋಷಕರ ಶಿಕ್ಷಕರ ಪಾತ್ರ ಅತಿ ದೊಡ್ಡದು. ಮಕ್ಕಳಿಗೆ ಸಕಾಲದಲ್ಲಿ ಸರಿಯಾದ ಸಂಸ್ಕಾರ ಹಾಗೂ ಕಲೆ, ಸಾಂಸ್ಕೃತಿಕ ಕಲೆಗಳ ಬಗ್ಗೆ ಅರಿವು ಮೂಡಿಸಿದಲ್ಲಿ ಮುಂದಿನ ದಿನಗಳಲ್ಲಿ ಮ್ಕಕಳು ಸುಸಂಸ್ಕೃತರಾಗುತ್ತಾರೆ ಎಂದರು.
ನ್ಯೂ ಪಬ್ಲಿಕ್ ಶಾಲೆ ಕಾರ್ಯದರ್ಶಿ ಪಿ.ಎನ್.ರಾಜಶೇಖರ್ ಮಾತನಾಡಿ, ಮಕ್ಕಳ ಪ್ರತಿಭೆ ಬೆಳಕಿಗೆ ಬರುವುದಕ್ಕೆ ಪಠ್ಯೇತರ ಚಟುವಟಿಕೆ ಪೂರಕ ಹಾಗೂ ಪ್ರೋತ್ಸಾಹ ಅಗತ್ಯವಾಗಿದೆ. ಗ್ರಾಮೀಣ ಮಕ್ಕಳಿಗೆ ಪಠ್ಯ ಶಿಕ್ಷಣ ನೀಡುವುದಕ್ಕೆ ಮಾತ್ರ ಸೀಮಿತಗೊಳ್ಳಬಾರದು. ಅವರಿಗೆ ಭಾರತೀಯ ಸಾಂಸ್ಕೃತಿಕ ಕಲೆಗಳನ್ನು ಸಹ ಕಲಿಸುವಲ್ಲಿ ಪೋಷಕರು ಹಾಗೂ ಶಿಕ್ಷಕರು ಸಕ್ರಿಯರಾಗಬೇಕೆಂದರು.ತಾಲೂಕಿನ ವಿವಿಧ ಶಾಲೆಗಳ ಮಕ್ಕಳು ಭಾಗವಹಿಸಿ ಜಾನಪದ ಗೀತೆಗಳಿಗೆ ನೃತ್ಯ ರೂಪಕಗಳನ್ನು ಪ್ರದರ್ಶಿಸಿ ಬಹುಮಾನಗಳನ್ನು ಪಡೆದರು.
ಪಟ್ಟಣ ಪಂಚಾಯ್ತಿ ಹಿರಿಯ ಆರೋಗ್ಯ ನಿರೀಕ್ಷಕ ಶಿವಣ್ಣ, ಅರವಿಂದ ಶಾಲೆ ದೈಹಿಕ ಶಿಕ್ಷಕ ಮನೋಹರ್, ಮುಖ್ಯ ಶಿಕ್ಷಕಿ ಪರಿಮಳಾ, ಸಹ ಶಿಕ್ಷಕರಾದ ಮೊಹಸೀನಾ, ಅಶ್ವತ್ಥಪ್ಪ, ಶ್ರೀನಿವಾಸ್, ಗೋಪಾಲಕೃಷ್ಣ, ಮುನಿರಾಜು ಸೇರಿದಂತೆ ಹಲವರು ಇದ್ದರು.