'ಎತ್ತಿನಹೊಳೆ'ಗೆ ತಡೆಯಾಜ್ಞೆ: ಯೋಜನೆ ಜಾರಿ ವಿಳಂಬ
ಚಿಕ್ಕಬಳ್ಳಾಪುರ: ಚುನಾವಣೆಯ ಲಾಭಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ತರಾತುರಿಯಲ್ಲಿ ಮಾಡಲಾಗಿದ್ದ ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆಗೆ ಹೈಕೋರ್ಟಿನಿಂದ ತಡೆಯಾಜ್ಞೆ ತರಲಾಗಿದೆ. ಹಾಗಾಗಿ ಈ ಯೋಜನೆ ಜಾರಿ ಮತ್ತಷ್ಟು ವಿಳಂಬವಾಗಲಿದೆ ಎಂದು ಶಾಶ್ವತ ನೀರಾವರಿ ಹೋರಾಟ ಅಧ್ಯಕ್ಷ ಆರ್. ಆಂಜನೇಯರೆಡ್ಡಿ ಆತಂಕ ವ್ಯಕ್ತಪಡಿಸಿದರು.
ನಗರದಲ್ಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆ ಅವೈಜ್ಞಾನಿಕ. ಸಮರ್ಪಕವಾಗಿ ಪರಿಶೀಲನೆ ನಡೆಸದೇ ಯೋಜನೆ ಯಾರಿಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡಬಾರದು ಎಂದು ಕರಾವಳಿ ಪ್ರದೇಶದ ಕೆ.ಎನ್.ಸೋಮಶೇಖರ್ ಹೈಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ತಿಳಿಸಿದರು.
ಶಾಶ್ವತ ನೀರಾವರಿ ಹೋರಾಟ ಸಮಿತಿ ಯಾವುದೇ ಪಕ್ಷವಾಗಿ ಪರವಾಗಿಲ್ಲ. ಪಕ್ಷಗಳು ಚುನಾವಣೆಯಲ್ಲಿ ನೀರಾವರಿ ಯೋಜನೆಯ ಜಾರಿಯ ಬಗ್ಗೆ ತಮ್ಮ ಪ್ರಣಾಳಿಕೆಗಳಲ್ಲಿ ತಿಳಿಸಿದ್ದು, ಯಾವುದೇ ಅಭ್ಯರ್ಥಿ ಚುನಾವಣೆಯಲ್ಲಿ ಗೆಲ್ಲಲಿ, ಸೋಲಲಿ. ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ ಎಂದರು.
ಮುಖಂಡ ಕೆ.ಸಿ.ರಾಜಾಕಾಂತ್ ಮಾತನಾಡಿ, ಈ ಭಾಗಕ್ಕೆ ಶಾಶ್ವತ ನೀರಾವರಿ ಸೌಲಭ್ಯವನ್ನು ಒದಗಿಸಬೇಕೆಂದು ಒತ್ತಾಯಿಸಿ ಹೋರಾಟವನ್ನು ಪಕ್ಷಾತೀತವಾಗಿ ನಡೆಸಿಕೊಂಡು ಬರಲಾಗುತ್ತಿದೆ.
ಸರ್ಕಾರದ ಮೇಲೆ ನಾನಾ ರೀತಿಯಲ್ಲಿ ಒತ್ತಡ ಹೇರಲಾಗುತ್ತಿದೆ. ಬಹು ಅನುಕೂಲಕರವಾದ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು. ಕೇವಲ ಚುನಾವಣಾ ಲಾಭಕ್ಕಾಗಿ ಅವೈಜ್ಞಾನಿಕ ಯೋಜನೆಗಳನ್ನು ಜಾರಿಗೆ ತರಲು ಮುಂದಾದರೆ ವಿರೋಧಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ನೀರಾವರಿ ಹೋರಾಟಗಾರರಾದ ಪುರದಗಡ್ಡೆ ಕೃಷ್ಣಪ್ಪ, ಮಳ್ಳೂರು ಹರೀಶ್, ಎಸ್.ಲಕ್ಷ್ಮಯ್ಯ, ಚಲಪತಿಗೌಡ, ನಾರಾಯಣಸ್ವಾಮಿ, ರವಿ, ಸುಷ್ಮಾ ಶ್ರೀನಿವಾಸ್, ನಿರ್ಮಲ ಮುಂತಾದವರು ಹಾಜರಿದ್ದರು.