ಕೋಚಿಮುಲ್: ಕಾಂಗ್ರೆಸ್ ಗೆಲವು ಖಚಿತ
ಕೋಲಾರ: ಪ್ರತಿಷ್ಠಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಆಡಳಿತ ಮಂಡಳಿಗೆ ಮೇ.25 ರಂದು ಭಾನುವಾರ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲ್ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸಂಸದ ಕೆ.ಎಚ್. ಮುನಿಯಪ್ಪ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಎರಡು ಮಹಿಳಾ ಕ್ಷೇತ್ರ ಸೇರಿದಂತೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ 12 ಕ್ಷೇತ್ರಗಳಿಗೆ ಕಾಂಗ್ರೆಸ್ಸಿನಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ, ಮಾಲೂರು ತಾಲೂಕಿನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತೇವೆಂದರು.
ಮಾಲೂರು ತಾಲೂಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಲ್ಲ, ಜೆಡಿಎಸ್ನಿಂದ ಸ್ಪರ್ಧಿಸಿರುವ ಇಬ್ಬರು ಅಭ್ಯರ್ಥಿಗಳ ಪೈಕಿ ಯಾರನ್ನು ಬೆಂಬಲಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅನಿಲ್ಕುಮಾರ್, ಮಾಜಿ ಶಾಸಕ ಕೃಷ್ಣಯ್ಯಶೆಟ್ಟಿ, ಮುಖಂಡ ಚನ್ನಕೇಶವ ಸೇರಿದಂತೆ ಮಾಲೂರು ತಾಲೂಕಿನ ಮುಖಂಡರು ನಾಳೆ ಸಭೆ ಸೇರಿ ಯಾರನ್ನು ಬೆಂಬಲಿಸಬೇಕೆಂದು ಅಂತಿಮ ನಿರ್ಧಾರ ಕೈಗೊಳ್ಳದಿದ್ದಾರೆ ಎಂದರು.
ಜಿಲ್ಲೆಯ ಮೂರು ಪ್ರಮುಖ ಸಹಕಾರಿ ಸಂಸ್ಥೆಗಳಾದ ಕೋಚಿಮುಲ್, ಡಿಸಿಸಿ ಬ್ಯಾಂಕ್ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಕಾಂಗ್ರೆಸ್ ವಶದಲ್ಲಿದೆ. ಕೋಚಿಮುಲ್ಗೆ ನಡೆಯಲಿರುವ ಚುನಾವಣೆಯಲ್ಲಿ ಮತ್ತೆ ನಮ್ಮ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ,ಸಂಸದ ಕೆ.ಹೆಚ್.ಮುನಿಯಪ್ಪನವರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸಲಾಗುವುದೆಂದು ತಿಳಿಸಿದರು.
ಮಾಲೂರು ತಾಲೂಕಿನಲ್ಲಿ ಜೆಡಿಎಸ್ನ ಅಧಿಕೃತ ಅಭ್ಯರ್ಥಿಯಾಗಿ ನಂಜೇಗೌಡ ಹಾಗೂ ಬಂಡಾಯ ಅಭ್ಯರ್ಥಿಯಾಗಿ ಕೋಚಿಮುಲ್ ಮಾಜಿ ಅಧ್ಯಕ್ಷರೂ ಆದ ಡಾ. ಪ್ರಸನ್ನ ಸ್ಪರ್ಧಿಸಿದ್ದು ಕಾಂಗ್ರೆಸ್ ಮುಖಂಡರು ಬಂಡಾಯ ಅಭ್ಯರ್ಥಿಯನ್ನು ಬೆಂಬಲಿಸುವ ಸಾಧ್ಯತೆಗಳಿವೆ.