ನೀರಿಗಾಗಿ ಪಾಂರಡಹಳ್ಳಿ ಗ್ರಾಪಂಗೆ ಮುತ್ತಿಗೆ
ಕೆಜಿಎಫ್: ಪಾಂರಡಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಇಲ್ಲಿನ 5 ಸಾವಿರಕ್ಕೂ ಹೆಚ್ಚು ಗ್ರಾಮಸ್ಥರಿಗೆ ಕುಡಿಯುವ ನೀರನ್ನು ಪೂರೈಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಳೆದ ಎರಡು ತಿಂಗಳಿಂದ ಕುಡಿಯಲು ನೀರಿಲ್ಲದೆ ಗ್ರಾಮಸ್ಥರು ಹಲವಾರು ಸಮಸ್ಯೆ ಎದುರಿಸುತ್ತಿದ್ದು ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳಿಗೆ ನೀರು ಸರಬರಾಜು ಮಾಡುವಂತೆ ಮನವಿ ಮಾಡಿದ್ದರೂ ಈವರೆಗೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಈ ಹಿಂದೆ ನೀರಿಗಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸಿದಾಗ ಒಂದೆರಡು ದಿನಗಳಲ್ಲಿ ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡುವುದಾಗಿ ಭರವಸೆ ನೀಡಿದ್ದರೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ ಗ್ರಮ ಪಂಚಾಯಿತಿ ಅಧಿಕಾರಿಗಳು ಸರಿಯಾಗಿ ಕಚೇರಿಗೆ ಆಗಮಿಸುತ್ತಿಲ್ಲ. ಇಲ್ಲಿನ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಕಚೇರಿಯ ಮೆಟ್ಟಿಲು ಹತ್ತಿಳಿದು ಸಾಕಾಗಿ ಹೋಗಿದೆ ಎಂದು ಅದಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು. ಸ್ಥಳಕ್ಕಾಗಮಿಸಿದ ಅಭಿವೃದ್ಧಿ ಅಧಿಕಾರಿ ಚಿರಂಜೀವಿಯನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು ನಂತರ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಕೈಬಿಡಲಾಯಿತು.
ಪ್ರತಿಭಟನೆಯಲ್ಲಿ ನಂಜುಂಡಪ್ಪ, ಶ್ರೀನಿವಾಸಲು, ಮದಿರಪ್ಪ, ಪಲ್ಲವಿ, ಸುಬ್ರಮಣಿ, ನಾಗರಾಜ್ ಮತ್ತಿತರರು ಹಾಜರಿದ್ದರು.