ಕುಡಿವ ನೀರಿಗಾಗಿ ಪಪಂಗೆ ಮುತ್ತಿಗೆ
ಯಲಬುರ್ಗಾ: ಪಟ್ಟಣಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆಯಲ್ಲಿ ಸ್ಥಳೀಯ ಪಟ್ಟಣ ಪಂಚಾಯ್ತಿ ವಿಫಲವಾಗಿದೆ ಎಂದು ಆರೋಪಿಸಿ ಸೋಮವಾರ ಇಲ್ಲಿನ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಹಾಗೂ ಮಹಿಳೆಯರು ಖಾಲಿ ಕೊಡಗಳೊಂದಿಗೆ ಪಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಮೊಗ್ಗಿ ಬಸವೇಶ್ವರ ದೇವಸ್ಥಾನದಿಂದ ಹೊರಟ ಪ್ರತಿಭಟನಾಕಾರರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿ ಪಪಂ ಅಧ್ಯಕ್ಷ ಹಾಗೂ ಪಪಂ ಮುಖ್ಯಾಧಿಕಾರಿ ವಿರುದ್ಧ ಘೋಷಣೆ ಕೂಗಿದರು. ಬಳಿಕ ಪಪಂ ಕಚೇರಿಗೆ ತೆರಳಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ಜಯಕರ್ನಾಟಕ ಸಂಘಟನೆ ತಾಲೂಕಾಧ್ಯಕ್ಷ ಖಾಜಾವಲಿ ಮಾನ್ವಿ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿ, ಕುಡಿಯುವ ನೀರಿನ ಯೋಜನೆಗಾಗಿ ಸರ್ಕಾರ ಲಕ್ಷಾಂತರ ಅನುದಾನ ಬಿಡುಗಡೆ ಮಾಡಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡಿದ್ದರೆ ಜನತೆಗೆ ಈ ಸಮಸ್ಯೆ ಬರುತ್ತಿರಲಿಲ್ಲ. ಆದರೆ, ಪಪಂ ಅಧ್ಯಕ್ಷರು ಹಾಗೂ ಅಧಿಕಾರಿಗಳು ಬಂದ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾ ಮುಖಂಡ ಮಹೇಶ ಭೂತೆ ಮಾತನಾಡಿ, ಪಟ್ಟಣ ಪಂಚಾಯತ ಅಧ್ಯಕ್ಷ ಹಾಗೂ ಸದಸ್ಯರ ಅವಧಿ ಮುಗಿಯುವ ಹಂತಕ್ಕೆ ಬಂದಿದ್ದರಿಂದ ಅವರ್ಯಾರೂ ಪಟ್ಟಣದ ಅಭಿವೃದ್ಧಿ ಕಾರ್ಯಕ್ಕೆ ಮುಂದಾಗುತ್ತಿಲ್ಲ. ಬಂದ ಹಣ ನುಂಗುವ ಪ್ರಯತ್ನದಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉ.ಕ ಕಾರ್ಯಾಧ್ಯಕ್ಷ ವಿಜಯಕುಮಾರ ಕವಲೂರು ಮಾತನಾಡಿ, ಪಟ್ಟಣದ ಅಭಿವೃದ್ಧಿಗಾಗಿ ಬಂದ ಹಣವನ್ನು ಸದಸ್ಯರು ಸ್ವಾರ್ಥಕ್ಕಾಗಿ ಬಳಸಿಕೊಂಡು ತಮ್ಮ ಅಭಿವೃದ್ಧಿ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ಪಪಂ ಮುಖ್ಯಾಧಿಕಾರಿ ರಮೇಶ ಗೊಂದಕರ್ ಮಾತನಾಡಿ, ಅಂತರ್ಜಲಮಟ್ಟ ಕುಸಿದಿರುವುದರಿಂದ ನೀರಿನ ಸಮಸ್ಯೆ ತಲೆನೀರಿನ ಸಮಸ್ಯೆ ತಲೆದೋರಿದೆ ಜನತೆ ಸಹಕರಿಸಬೇಕೆಂದರು.
ಜಯಕರ್ನಾಟಕ ಸಂಘಟನೆಯ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಬಷೀರ ಅಹ್ಮದ್, ಮಂಜುನಾಥ ಹಳ್ಳಿ, ಶ್ರೀಧರಗೌಡ ಪಾಟೀಲ, ಬಸವರಾಜ ಬಿಕ್ಷಾವತಿಮಠ, ಪಾರ್ವತೆಮ್ಮ, ಶಿಲ್ಪಾ, ಲಕ್ಷ್ಮೀದೇವಿ, ಅನಸೂಯಾ, ಸಿದ್ಧಮ್ಮ, ಶಿವಲೀಲಾ, ಅನಸವ್ವ ಹಡಗಲಿ, ಮಂಜುನಾಥ ಗುಂಡ್ಲಾನೂರ, ಶರಣಪ್ಪ, ಶಂಕ್ರಪ್ಪ ಕೋತಿ, ಬಸಪ್ಪ ಬಳೂಟಗಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.