ಕೌಶಲ್ಯ ತರಬೇತಿ ಸ್ವಾವಲಂಬನೆಗೆ ಸಹಕಾರಿ
ಮಂಡ್ಯ: ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಹೊಲಿಗೆ ಯಂತ್ರದ ತರಬೇತಿ ಸಹಕಾರಿಯಾಗಿದೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಅಭಿಪ್ರಾಯಪಟ್ಟಿದ್ದಾರೆ.
ತಾಲೂಕಿನ ಹಳುವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗ್ರಾಮ ಪಂಚಾಯ್ತಿ ಮತ್ತು ರಾಷ್ಟ್ರೀಯ ಜನಪರ ಟ್ರಸ್ಟ್ ವತಿಯಿಂದ ಇತ್ತೀಚೆಗೆ ನಡೆದ ಗ್ರಾಪಂ ನಿಧಿಯಿಂದ ಶೇ.20ರ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರಿಗೆ ಸವಲತ್ತು ವಿತರಣೆ ಹಾಗೂ ಹೊಲಿಗೆ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಅವರು ಮಾತನಾಡಿದರು.
ಮನೆಯಲ್ಲಿ ಕುಳಿತು ಕಾಲ ಕಳೆಯುವುದಕ್ಕಿಂತ ಹೊಲಿಗೆ ತರಬೇತಿ ಪಡೆದು ಮಹಿಳೆಯರು ಬಟ್ಟೆ ಹೊಲಿಯುವುದರಿಂದ ಆರ್ಥಿಕವಾಗಿ ಸದೃಢವಾಗಬಹುದು ಎಂದರು.
ಗ್ರಾಮೀಣ ಭಾಗದಲ್ಲಿ ಮಹಿಳೆಯರು ಕೃಷಿ, ಹೈನುಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ದುಡಿಯುತ್ತಿದ್ದಾರೆ. ಸರ್ಕಾರ ಕೂಡ ಸ್ತ್ರೀ ಶಕ್ತಿ ಮತ್ತು ಸ್ವ ಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ ನೀಡಿ, ಅವರ ಬೆಳವಣಿಗೆಗೆ ಕಾರಣವಾಗಿದೆ.
ಈ ನಿಟ್ಟಿನಲ್ಲಿ ಮಹಿಳೆಯರು ಸರ್ಕಾರದ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಇದೆ ಸಂದರ್ಭದಲ್ಲಿ ಫಲಾನುಭವಿಗಳಿಗೆ ಸವಲತ್ತು ಹಾಗೂ ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರನ್ನು ಕೂಡ ಇದೆ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಗ್ರಾಪಂ ಅಧ್ಯಕ್ಷ ಡಿ.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷೆ ಸುಶೀಲಮ್ಮ, ಗ್ರಾಪಂ ಮಾಜಿ ಅಧ್ಯಕ್ಷ ಎಚ್.ಎಂ.ಸಿದ್ದರಾಜು, ಸದಸ್ಯ ಬಸವರಾಜು, ಮಾಜಿ ಸದಸ್ಯರಾದ ಕೆಂಪಯ್ಯ, ಮಹದೇವಪ್ಪ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಕೆ.ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.